
ಬ್ರಿಜ್ ಭೂಷಣ್ ಸಿಂಗ್ ಆಪ್ತ WFI ನೂತನ ಅಧ್ಯಕ್ಷ; ನಾನು ಕುಸ್ತಿಯನ್ನು ತೊರೆದಿದ್ದೇನೆ ಎಂದ ಸಾಕ್ಷಿ ಮಲಿಕ್!
ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿಷ್ಠಾವಂತ ಬೆಂಬಲಿಗ ಸಂಜಯ್ ಸಿಂಗ್ ಅವರು ಭಾರತದ ಕುಸ್ತಿ ಒಕ್ಕೂಟ (WFI)ದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಗ್ಗೆ ಸಾಕ್ಷಿ ಮಲಿಕ್ ತಮ್ಮ ನಿರಾಶೆ ವ್ಯಕ್ತಪಡಿಸಿದ್ದಾರೆ.
ರಿಯೋ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ, ಭಾರತದ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಗುರುವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಭಾವನಾತ್ಮಕ ಭಾಷಣ ಮಾಡಿ ಕುಸ್ತಿಯನ್ನು ತೊರೆಯುವುದಾಗಿ ಘೋಷಿಸಿದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾಕ್ಷಿ ಮಲಿಕ್, ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಭಾರತ ಕುಸ್ತಿ ಒಕ್ಕೂಟದ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಕುಟುಂಬ ಮತ್ತು ಆಪ್ತರಿಗೆ ಅವಕಾಶ ನೀಡುವುದಿಲ್ಲ ಎಂದು ಕ್ರೀಡಾ ಸಚಿವಾಲಯವು ಕುಸ್ತಿಪಟುಗಳಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಕಿಡಿಕಾರಿದರು.
ಉತ್ತರಪ್ರದೇಶ ಕುಸ್ತಿ ಫೆಡರೇಶನ್‌ನ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಸಂಜಯ್ ಸಿಂಗ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಬಲಗೈ ಬಂಟರಾಗಿದ್ದರು ಎಂದು ಸಾಕ್ಷಿ ಮಲಿಕ್ ಒತ್ತಿ ಹೇಳಿದರು.




