ಚಾಮರಾಜನಗರ: ವಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಹರಸಾಹಸ ಪಡುತ್ತಿರುವ ಬಿಜೆಪಿಗೆ ಆಪರೇಷನ್ ಹಸ್ತದ ಚಿಂತೆ ಕಾಡಲಾರಂಭಿಸಿದೆ. ಸುಮಾರು 20 ಶಾಸಕರು ಕಾಂಗ್ರೆಸ್ ಹೈಕಮಾಂಡ್ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಅವರು ವಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಿದ್ದೆಗೆಡಿಸುವಂತೆ ಮಾಡಿದ್ದಾರೆ.
ಈಗಾಗಲೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಬಹುಮತ ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದು ರಾಜ್ಯಭಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ, ಈಗ ಲೋಕಸಭಾ ಚುನಾವಣೆಗೂ ಮುನ್ನವೇ ಮತ್ತೊಂದು ಹೊಸ ಟಾಸ್ಕ್ಗೆ ಕೈ ಹಾಕಿದೆ. ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದ ಶಾಸಕರ ಮೇಲೆ ಕಣ್ಣಿಟ್ಟಿದ್ದು, ಇವರೊಂದಿಗೆ ಜೆಡಿಎಸ್ನ 10 ಶಾಸಕರ ಮೇಲೆಯೂ ಕಣ್ಣಿಟ್ಟಿದೆ.
ಅಪರೇಷನ್ ಹಸ್ತ ಮಾಡುವ ಮೂಲಕ ರಾಜ್ಯ ಬಿಜೆಪಿ ಹಾಗೂ ದಳಪತಿಗಳಿಗೆ ಟಕ್ಕರ್ ಕೊಡಲು ಮುಂದಾಗಿದೆ. ಅದರ ಮುಂದುವರೆದ ಭಾಗವಾಗಿ ನಿನ್ನ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಗಡಿನಾಡು ಚಾಮರಾಜನಗರದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬರೋಬ್ಬರಿ 20 ಮಂದಿ ಶಾಸಕರು ಕೈ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆಂದು ಮಾರ್ಮಿಕವಾಗಿ ಹೇಳಿಕೆ ಕೊಟ್ಟು ಬಿಜೆಪಿ ಹಾಗೂ ಜೆಡಿಎಸ್ ಪಾಳಯದವರ ನಿದ್ದೆಗೆಡಿಸಿದ್ದಾರೆ.
ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದ ಜಾರಕಿಹೊಳಿ ಅವರು, ಬಿಜೆಪಿಯವರ ಬಗ್ಗೆ 24 ಗಂಟೆಗಳ ಕಾಲ ಅಲರ್ಟ್ ಆಗಿರಬೇಕು. ಇಲ್ಲದೇ ಹೋದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.
ರಾಜ್ಯ ನಾಯಕರು ಅಪರೇಷನ್ ಹಸ್ತಕ್ಕೆ ಮುಂದಾಗಿದ್ದಾರೆ ಹಾಗೂ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಬರುವವರಿಗೆ ಸ್ವಾಗತ ಕೋರಿದ್ದಾರೆಂದು ತಿಳಿಸಿದ್ದಾರೆ.
ಇದೇ ವೇಳೆ ತಮ್ಮ ಸಹೋದರ ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್ ಪಕ್ಷ ಸೆರ್ಪಡೆಯಾಗುತ್ತಾರಾ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ, ಈ ಬಗ್ಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳುವ ಮೂಲಕ ರಾಜಕಾರಣದಲ್ಲಿ ಯಾರು ಶಾಶ್ವತ ಮಿತ್ರರೂ ಅಲ್ಲ ಶತ್ರುಗಳು ಅಲ್ಲಾ ಎಂಬ ಸಂದೇಶ ನೀಡಿದರು.