ಲೋಕಸಭಾ ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಎಂಎಲ್ ಸಿ ಸ್ಥಾನಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ; ನಾಳೆ ಕಾಂಗ್ರೆಸ್ ಸೇರ್ಪಡೆ?

ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಲ್ಲೇ ರಾಜ್ಯ ಬಿಜೆಪಿಗೆ ಮತ್ತೊಂದು ಶಾಕ್ ಆಗಿದೆ. ವಿಧಾನ ಪರಿಷತ್ ಸದಸ್ಯತ್ವಕ್ಕೆ ಕೆ.ಪಿ.ನಂಜುಂಡಿ ರಾಜೀನಾಮೆ ನೀಡಿದ್ದಾರೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದ ಕೆ.ಪಿ.ನಂಜುಂಡಿ ಇದೀಗ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಗೆ ತೆರಳಿ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕೆ.ಪಿ.ನಂಜುಂಡಿ ಅವರನ್ನು ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಯಾಗಿ ಚರ್ಚಿಸಿದ್ದರು. ಕೆ.ಪಿ. ನಂಜುಂಡಿ ಇಂದು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ನಾಳೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಪಕ್ಷ ಸೇರ್ಪಡೆ ಕುರಿತಾಗಿ, ನಂಜುಂಡಿ ಮಾತುಕತೆ ನಡೆಸಿದ್ದಾರೆ. ಅವರ ಪಕ್ಷ ಸೇರ್ಪಡೆಗೆ ನಾಯಕರು ಒಪ್ಪಿಗೆ ನೀಡಿದ್ದು, ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ವಿಧಾನಸಭೆಯಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಚುನಾಯಿತರಾಗಿರುವ ನಂಜುಂಡಿ ಅವರ ಸದಸ್ಯತ್ವ ಜೂನ್ 17ಕ್ಕೆ ಮುಕ್ತಾಯವಾಗಲಿದೆ.

Latest Indian news

Popular Stories