ಎಸ್.ಸಿ/ಎಸ್ಟಿ ಕಾಯಿದೆಯಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಚಾರ್ಜ್ ಶೀಟ್ ವಿಳಂಬ – ಪೊಲೀಸ್ ಅಧಿಕಾರಿಗಳ ವಿರುದ್ಧ ಸಿ.ಎಮ್ ಗರಂ

ಬೆಂಗಳೂರು, ಸೆ 8 : 120 ದಿನಗಳು ಕಳೆದರೂ ಜಾತಿ ದೌರ್ಜನ್ಯ ಪ್ರಕರಣಗಳ ಆರೋಪಿಗಳ ವಿರುದ್ಧ ಏಕೆ ಚಾರ್ಜ್‌ಶೀಟ್ ದಾಖಲಿಸಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್‌ಪಿ ಮತ್ತು ಡಿಸಿಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಂಕಿ-ಅಂಶಗಳನ್ನು ಮಂಡಿಸಿ, ಅಧಿಕಾರಿಗಳನ್ನು ಪ್ರಶ್ನಿಸಿದರು.

ಕಳೆದ ಐದು ವರ್ಷಗಳಲ್ಲಿ ದಾಖಲಾದ 10,893 ಪ್ರಕರಣಗಳ ಪೈಕಿ 1,100 ಪ್ರಕರಣಗಳಿಗೆ 120 ದಿನಗಳೊಳಗೆ ಮೊಕದ್ದಮೆ ದಾಖಲಾಗಿಲ್ಲ ಎಂದ ಅವರು, ಇದು ಪರಿಶಿಷ್ಟ ಜಾತಿ ಮತ್ತು ಪಂಗಡದವರ ಬಗ್ಗೆ ಅಧಿಕಾರಿಗಳಿಗಿರುವ ಅಸಡ್ಡೆಯನ್ನು ತೋರಿಸುತ್ತದೆ ಹಾಗೂ ಈ ಧೋರಣೆ ಸಂತ್ರಸ್ತರಿಗೆ ನ್ಯಾಯ ದೊರಕಿಸುವುದಿಲ್ಲ ಎಂದು ಹೇಳಿದರು.

ಇದನ್ನು ಸಹಿಸುವುದಿಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್‌ಪಿಸಿ) ಅಡಿಯಲ್ಲಿ 90 ದಿನಗಳಲ್ಲಿ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ 60 ದಿನಗಳಲ್ಲಿ ಚಾರ್ಜ್‌ಶೀಟ್ ಸಲ್ಲಿಸದಿದ್ದರೆ ಆರೋಪಿಗಳು ಸುಲಭವಾಗಿ ಜಾಮೀನು ಪಡೆಯಬಹುದು ಎಂದು ಅವರು ಹೇಳಿದರು. ಸುಲಭವಾಗಿ ಜಾಮೀನು ಪಡೆಯುವವರು ಕಾನೂನಿನ ಭಯವನ್ನು ಹೊಂದಿರುತ್ತಾರೆಯೇ ? ಎಂದು ಪ್ರಶ್ನಿಸಿದರು.

‘‘ದೇಶದಲ್ಲಿ ಕರ್ನಾಟಕ ಪೊಲೀಸರು ನಂಬರ್ ಒನ್ ಎಂಬ ಅಭಿಪ್ರಾಯವಿದೆ. ಆದರೆ ದೌರ್ಜನ್ಯ ತಡೆ ಕಾಯ್ದೆಯಡಿ ಶಿಕ್ಷೆ ಪ್ರಮಾಣ ಶೇ.3.44 ಮಾತ್ರ. ಇದರರ್ಥ ಎಸ್‌ಸಿ/ಎಸ್‌ಟಿ ದೌರ್ಜನ್ಯ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆ ನಿರ್ಲಕ್ಷ್ಯ ವಹಿಸಿದೆಯೇ? ನಮ್ಮ ಸರ್ಕಾರ ಇದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

ವಿಳಂಬಕ್ಕೆ ಎಸ್ಪಿ ಮತ್ತು ಡಿಸಿಪಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ ಅವರು, ಪ್ರಕರಣಗಳ ತನಿಖಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚಿಸಿದರು.

ಈ ಪ್ರಕರಣಗಳ ತನಿಖೆಯ ಪ್ರಗತಿಗೆ ಸಂಬಂಧಿಸಿದಂತೆ ಪ್ರತಿ ತಿಂಗಳು ಪರಿಶೀಲನಾ ಸಭೆ ನಡೆಸಬೇಕು ಎಂದು ಅವರು ಹೇಳಿದರು.

ಕೆಡಿಪಿ ಸಭೆಗಳಲ್ಲಿ ದೌರ್ಜನ್ಯ ಪ್ರಕರಣಗಳ ಪ್ರಗತಿ ಪರಿಶೀಲನೆಗೆ ಎಲ್ಲ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸುತ್ತೋಲೆ ಹೊರಡಿಸಲಾಗುವುದು ಎಂದು ಸಿಎಂ ಹೇಳಿದರು. ಜಿಲ್ಲಾಧಿಕಾರಿಗಳು ಸಭೆ ನಡೆಸಿ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ಮತ್ತೊಂದು ಸುತ್ತೋಲೆ ಹೊರಡಿಸಲಾಗುವುದು ಎಂದಿದ್ದಾರೆ.

Latest Indian news

Popular Stories