ಸಿಎಂ ಸಿದ್ದರಾಮಯ್ಯ ಸಲಹೆಗಾರರಾಗಿ ಸುನಿಲ್ ಕಾನುಗೋಲು ನೇಮಕ: ಸಂಪುಟ ದರ್ಜೆ ಸಚಿವರ ಸ್ಥಾನಮಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಲಹೆಗಾರರಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರ ಸುನಿಲ್ ಕಾನುಗೋಲು ಅವರನ್ನು ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ನೇಮಿಸಲಾಗಿದೆ. ಶೀಘ್ರವೇ ನೇಮಕಾತಿ ಆದೇಶ ಹೊರಬೀಳಲಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. 

ಕಳೆದ ಮೇ 10ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾನುಗೋಲುಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. ಹಿಂದಿನ ಬಿಜೆಪಿ ಸರ್ಕಾರವನ್ನು ಸಮರ್ಥವಾಗಿ ಎದುರಿಸಲು ಅವರು ಕಾಂಗ್ರೆಸ್ ಪಕ್ಷಕ್ಕೆ ಚುನಾವಣಾ ತಂತ್ರಗಾರಿಕೆಯಲ್ಲಿ ಸಹಾಯ ಮಾಡಿದ್ದಾರೆ. 

2024ರ ಲೋಕಸಭೆ ಚುನಾವಣೆಗೆ ಅವರ ನೆರವು ಪಡೆಯಲು ಪಕ್ಷದ ರಾಜ್ಯ ಘಟಕ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯದ 28 ಲೋಕಸಭಾ ಸ್ಥಾನಗಳ ಪೈಕಿ 20 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಪಕ್ಷ ಹೊಂದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯ ಸೋಲನ್ನು ಕಂಡು ಕೇವಲ ಒಂದು ಸ್ಥಾನವನ್ನು ಗೆದ್ದಿತ್ತು. ವಿಧಾನಸಭೆ ಚುನಾವಣೆಯಲ್ಲಿ ಅಮೋಘ ಪ್ರದರ್ಶನ ನೀಡಿದ ಕಾಂಗ್ರೆಸ್ ರಾಜ್ಯದಲ್ಲಿ ತನ್ನ ಗೆಲುವಿನ ಗತಿಯನ್ನು ಕಾಯ್ದುಕೊಳ್ಳಲು ಉತ್ಸುಕವಾಗಿದೆ.

Latest Indian news

Popular Stories