
ಬೆಂಗಳೂರು | ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು 84,900 FORM7 ಅರ್ಜಿ ಸಲ್ಲಿಕೆ:ಆದರೆ ಒಂದೂ ಹೆಸರು ಡಿಲೀಟ್ ಆಗಿಲ್ಲ -SIR ವಿವಾದದ ನಡುವೆ ಸಿಇಒ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಮತದಾರರ ಹೆಸರುಗಳನ್ನು ಕೈಬಿಡಲು (ಡಿಲೀಟ್ ಮಾಡಲು) ಒಟ್ಟು 84,900 ‘ಫಾರ್ಮ್-7’ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಸೂಕ್ತ ಹಾಗೂ ಕಾನೂನುಬದ್ಧ ಪರಿಶೀಲನೆ ನಡೆಸದೆ ಯಾವುದೇ ಒಬ್ಬ ಅರ್ಹ ಮತದಾರರ ಹೆಸರನ್ನೂ ಪಟ್ಟಿಯಿಂದ ತೆಗೆದುಹಾಕಲಾಗಿಲ್ಲ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ವಿ. ಅನ್ಬುಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಬೀದರ್ ಜಿಲ್ಲೆಯಲ್ಲಿ ಅತ್ಯಂತ ಹೆಚ್ಚು, ಅಂದರೆ 5,915 ಫಾರ್ಮ್-7 ಅರ್ಜಿಗಳು ಬಂದಿವೆ. ತದನಂತರ ಶಿವಮೊಗ್ಗ (5,760) ಮತ್ತು ದಕ್ಷಿಣ ಕನ್ನಡ (4,746) ಜಿಲ್ಲೆಗಳಲ್ಲಿ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ.
ಫಾರ್ಮ್-7 ಅನ್ನು ದುರುಪಯೋಗಪಡಿಸಿಕೊಂಡು ಸಾಮೂಹಿಕವಾಗಿ (Bulk applications) ನಕಲಿ ಅರ್ಜಿಗಳನ್ನು ಸಲ್ಲಿಸಿ, ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲು ಯತ್ನಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಸಿಇಒ ಕಚೇರಿ ಮುಂದೆ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ನಕಲಿ ಅಥವಾ ಸುಳ್ಳು ವಿವರ ನೀಡಿ ಫಾರ್ಮ್-7 ಸಲ್ಲಿಸಿದವರ ವಿರುದ್ಧ ಎಫ್ಐಆರ್ (FIR) ದಾಖಲಿಸಿ ಕಾನೂನು ಕ್ರಮ ಜರುಗಿಸುವಂತೆ ಮುಖ್ಯ ಚುನಾವಣಾಧಿಕಾರಿಗಳು ಆಯಾ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವ್ಯಕ್ತಿಯ ಮರಣ ಪ್ರಮಾಣಪತ್ರ ಅಥವಾ ನಕಲಿ (Duplicate) ಮತದಾರರ ಪುರಾವೆಗಳಿದ್ದಲ್ಲಿ ಮಾತ್ರವೇ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.
ಯಾವುದೇ ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಸಿಇಒ ತಿಳಿಸಿದ್ದಾರೆ.




