
ಉಡುಪಿ ಜಿಲ್ಲೆಯ ಇಂದಿನ ಪ್ರಮುಖ ಸುದ್ದಿಗಳು
ಚುನಾವಣಾ ಕರ್ತವ್ಯ ನಿರತ ಅಧಿಕಾರಿಗಳಿಗೆ ಮತದಾನ: ಅರ್ಜಿ ಸಲ್ಲಿಸಲು 13 ಕೊನೆಯ ದಿನ
ಉಡುಪಿ, ಏಪ್ರಿಲ್ 11 : ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAದಿಸಿದAತೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಮತಗಟ್ಟೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರೆ ಅಧಿಕಾರಿಗಳು ಮತದಾನ ಮಾಡಲು ನಮೂನೆ 12 ಹಾಗೂ ನಮೂನೆ -12 ಎ ಗಳನ್ನು ಸಲ್ಲಿಸಲು ಮಾರ್ಚ್ 13 ಕೊನೆಯ ದಿನ.
ನಿಗಧಿತ ನಮೂನೆಯ ಅರ್ಜಿಗಳನ್ನು ಹಾಗೂ ಗುರುತಿನ ಚೀಟಿ ನಕಲು ಪ್ರತಿ, ನೇಮಕಾತಿ ಆದೇಶದ ನಕಲು ಪ್ರತಿಯೊಂದಿಗೆ ಸ್ಥಳೀಯ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮಕ್ಕಳ ಬಳಕೆ ನಿಷೇಧ
ಉಡುಪಿ: ಭಾರತದ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024 ರ ಚುನಾವಣಾ ಕಾರ್ಯ ಹಾಗೂ ಪ್ರಚಾರ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿರುತ್ತದೆ.
ಕೇಂದ್ರ ಸರ್ಕಾರವು ಬಾಲ ಹಾಗೂ ಕಿಶೋರ ಕಾರ್ಮಿಕರ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಅನ್ನು ಜಾರಿಗೆ ತಂದಿದ್ದು, ಸದರಿ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಯಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಹಾಗೂ 14-18
ರ ವಯಸ್ಸಿನ ಕಿಶೋರ ಕಾರ್ಮಿಕ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಲೋಕಸಭಾ ಚುನಾವಣೆ-2024 ರ ಚುನಾವಣಾ ಕಾರ್ಯ ಮತ್ತು ಪ್ರಚಾರ ಚಟುವಟಿಕೆಗಳಲ್ಲಿ ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು ಬಾಲ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದ್ದು, ತಪ್ಪಿದಲ್ಲಿ ಬಾಲ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಮತ್ತು ತಿದು್ದಪಡಿ ಕಾಯ್ದೆ 2016 ಅನ್ವಯ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸಿಇಟಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ ಒಟ್ಟು 8037 ಪರೀಕ್ಷಾರ್ಥಿಗಳು : ಜಿಲ್ಲಾಧಿಕಾರಿ ವಿದ್ಯಾಕುಮಾರಿ
ಉಡುಪಿ: ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಪರಿಣಾಮಕಾರಿ ರೀತಿಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಪಾರದರ್ಶಕತೆಯಿಂದ ಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ನಡೆಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2024 ನೇ ನಾಲಿನ ಸಿಇಟಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಬಾರಿ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತಮ ರೀತಿಯಲ್ಲಿ ಅಂಕ ಬಂದಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿ, ಜಿಲ್ಲೆಯ ಎಲ್ಲಾ ಶಿಕ್ಷಕರಿಗೂ, ಪ್ರಾಂಶುಪಾಲರಿಗೂ ಹಾಗೂ ಅಧಿಕಾರಿಗಳಿಗೂ ಅಭಿನಂದನೆಗಳನ್ನು ತಿಳಿಸಿದ ಅವರು, ವಿಜ್ಞಾನ ವಿದ್ಯಾರ್ಥಿಗಳಿಗೆ ಮುಂದಿನ ವಾರ ನಡೆಯಲಿರುವ ಸಿ.ಇ.ಟಿ ಪರೀಕ್ಷೆಗೆ ಕೊನೆಯ ಕ್ಷಣಗಳಲ್ಲಿರುವ ಗೊಂದಲ ನಿವಾರಣೆಗೆ ಗೈಡ್ ಮಾಡಬೇಕು ಎಂದರು. ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳು ಏಪ್ರಿಲ್ 18 ಮತ್ತು 19 ರಂದು ನಡೆಯಲಿದ್ದು, ಇದಕ್ಕಾಗಿ ಉಡುಪಿಯಲ್ಲಿ 6, ಕಾರ್ಕಳ ಹಾಗೂ ಕುಂದಾಪುರದಲ್ಲಿ ತಲಾ 4 ಹಾಗೂ ಬ್ರಹ್ಮಾವರದಲ್ಲಿ 3 ಸೇರಿದಂತೆ ಒಟ್ಟು 17 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 8037 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಬೇಕು. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಮನಸ್ಸು ಸೂಕ್ಷ್ಮವಾಗಿರುತ್ತದೆ. ಅದನ್ನರಿತು ಅವರಿಗೆ ಗೊಂದಲವಾಗದಂತೆ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದರು.
ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿಟಿವಿ ವ್ಯವಸ್ಥೆ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಾಲೂಕುಗಳ ತಹಶೀಲ್ದಾರ್ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಸದಸ್ಯರ ತಂಡಗಳು ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ಸೂಚನೆ ನೀಡಿದರು. ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು, ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು ಎಂದ ಅವರು, ಎಲ್ಲಾ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಕೆಮರಾ ಗಳ ಅಳವಡಿಕೆ ಮಾಡಬೇಕು ಎಂದರು.
ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಹಾಗೂ ಮುಂಜಾಗ್ರತೆಯಾಗಿ ಎಲ್ಲಾ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಮತ್ತು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿಯೊಂದು ಪರೀಕ್ಷಾ ಕೊಠಡಿಯಲ್ಲಿ ಗಡಿಯಾರದ ವ್ಯವಸ್ಥೆಯನ್ನು ಮಾಡಬೇಕು. ಬೇಸಿಗೆ ಕಾಲದ ಹಿನ್ನೆಲೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದ ಅವರು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲವಾಗುವಂತೆ ಈಗಿರುವ ಬಸ್ಗಳ ಸಂಚಾರ ವ್ಯವಸ್ಥೆಯಲ್ಲಿ ಅಡಚಣೆಯಾಗದಂತೆ ನೋಡಿಕೊಳ್ಳಬೇಕೆಂದು ಕೆ.ಎಸ್.ಆರ್.ಟಿ.ಸಿ ಹಾಗೂ ಆರ್.ಟಿ.ಓ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದ್ದು, ಪರೀಕ್ಷೆಗಳು ಆರಂಭವಾಗುವ ಸಮಯಕ್ಕಿಂತ ಸಾಕಷ್ಟು ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರುವಂತೆ ತಿಳಿಸಿದರು.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವನ್ನು ನಿಯೋಜಿಸದಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿಗಳು, ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ, ಪರೀಕ್ಷೆಯನ್ನು ಸಮರ್ಥವಾಗಿ ಮತ್ತು ಅತ್ಯಂತ ಸುವ್ಯವಸ್ಥಿತವಾಗಿ ನಡೆಸುವಂತೆ ನಿರ್ದೇಶನ ನೀಡಿದರು. ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ ಸಿದ್ಧಲಿಂಗಪ್ಪ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ, ಕಾಲೇಜು ಪ್ರಾಂಶುಪಾಲರುಗಳು ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.




