ಬಾರಾಬಂಕಿ: ಅತ್ಯಾಚಾರದಿಂದ ನೊಂದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತಪ್ರದೇಶದ ಹೈದರ್‌ಗಢ ಪ್ರದೇಶದಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಬಾಲಕಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಿ, ಹೇಳಿಕೆ ದಾಖಲಿಸಬೇಕಿತ್ತು. ಆದರೆ, ಅಷ್ಟರಲ್ಲಾಗಲೇ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ನಡುವೆ ಪ್ರಕರಣ ಸಂಬಂಧ ಕರ್ತವ್ಯ ಲೋಪವೆಸಗಿದ ತನಿಖಾಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಜೂನ್ 17 ರಂದು ಹೈದರ್‌ಗಢ ಪೊಲೀಸ್ ಠಾಣೆಯಲ್ಲಿ 16 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದ ಪ್ರಕರಣವೊಂದು ದಾಖಲಾಗಿತ್ತು. ಪ್ರಕರಣ ಸಂಬಂಧ ಆರೋಪಿಯನ್ನು ಬಂಧನಕ್ಕೊಳಪಡಿಸಲಾಗಿದೆ. ಪ್ರಕರಣ ಸಂಬಂಧ ಬಾಲಕಿ ಹೇಳಿಕೆ ನೀಡಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರಾಗಬೇಕಿತ್ತು. ಅಷ್ಟರಲ್ಲಾಗಲೇ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ಅವರು ಹೇಳಿದ್ದಾರೆ.
ಈ ನಡುವೆ ಪೊಲೀಸರ ವಿರುದ್ಧ ಬಾಲಕಿಯ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಕರಣ ಹಿಂಪಡೆಯುವಂತೆ ಆರೋಪಿ ಬೆದರಿಕೆ ಹಾಕುತ್ತಿದ್ದ. ಆತನನ್ನು ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದರಿಂದಲೇ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಹೇಳಿದ್ದಾರೆ.
ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, ಆರೋಪಗಳ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಕರ್ತವ್ಯ ಲೋಪದ ಕಾರಣಕ್ಕಾಗಿ ತನಿಖಾಧಿಕಾರಿ ಯೋಗೇಂದ್ರ ಪ್ರತಾಪ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.