ಕಾವೇರಿ ನದಿ ಪಾತ್ರದ ಪ್ರವಾಹ ಪೀಡಿತ ಪ್ರದೇಶ ಕರಡಿಗೋಡು ಗ್ರಾಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಭೋಸರಾಜು, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ ಎಸ್ ಪೊನ್ನಣ್ಣ ಅವರು ಭೇಟಿ ನೀಡಿ ಸಂತ್ರಸ್ಥರ ಅಹವಾಲು ಆಲಿಸಿದರು.
ಪ್ರತಿ ಬಾರಿ ಪ್ರವಾಹದ ಭೀತಿ ಎದುರಿಸುತ್ತಿದ್ದು, ಬದುಕು ದುಸ್ತರವಾಗಿದೆ. ಆದ್ದರಿಂದ ನಮ್ಮನ್ನು ಸ್ಥಳಾಂತರ ಮಾಡಿ, ವಸತಿ ಕಲ್ಪಿಸುವಂತೆ ಕೋರಿದರು.
ಕರಡಿಗೋಡು ನದಿ ದಡದಲ್ಲಿ ಸುಮಾರು 70 ಕ್ಕೂ ಹೆಚ್ಚು ಕುಟುಂಬಗಳು ಇದ್ದು, ಜೀವನ ನಡೆಸುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು.
ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಚಿವರು ಸದ್ಯದಲ್ಲೇ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಸಚಿವರು ತಿಳಿಸಿದರು.
ಮಾಲ್ದಾರೆ ವ್ಯಾಪ್ತಿಯಲ್ಲಿ ಸಂತ್ರಸ್ತರಿಗಾಗಿ 10 ಎಕರೆ ಜಾಗ ಗುರುತು ಮಾಡಲಾಗಿದ್ದು, ಈ ಸಂಬಂಧ ಆದಷ್ಟು ಶೀಘ್ರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತಹಶೀಲ್ದಾರ್ ರಾಮಚಂದ್ರ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.