14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಪೂರ್ಣ; ಉತ್ತರ ಕರ್ನಾಟಕದತ್ತ ಈಗ ಚಿತ್ತ

ಬೆಂಗಳೂರು: ಹಳೇ ಮೈಸೂರು ಭಾಗ ಸೇರಿದಂತೆ 14 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆದಿದ್ದು, ರಾಜ್ಯದ ಉತ್ತರ ಭಾಗದ ಉಳಿದ 14 ಸ್ಥಾನಗಳಿಗೆ ನಡೆಯಲಿರುವ ಚುನಾವಣಾ ಕಣ ಇದೀಗ ರಂಗೇರಿದೆ. ಮೇ 7 ರಂದು ಉತ್ತರ ಕರ್ನಾಟಕದ 14 ಸ್ಥಾನಗಳಿಗೆ ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ.

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಶಿವಮೊಗ್ಗ ಹಾಗೂ ಕಾಂಗ್ರೆಸ್ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಶಿಕ್ಷಣ ತಜ್ಞ ವಿನಯ್‌ಕುಮಾರ್‌ ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದಾವಣಗೆರೆಯಲ್ಲಿ ಬಿಟ್ಟರೆ ಬಹುತೇಕ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ನಡೆಯಲಿದೆ. ಈ ಇಬ್ಬರೂ ಕುರುಬ ಸಮುದಾಯದವರಾಗಿದ್ದಾರೆ. ತಮ್ಮ ಪಕ್ಷದ ಯಾವುದೇ ಅಭ್ಯರ್ಥಿಗಳು ಸ್ಪರ್ಧಿಸದ ಹಿನ್ನೆಲೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲ ನೀಡಲಿದೆ.

ಬಿಜೆಪಿಯಿಂದ ಅಮಾನತುಗೊಂಡಿರುವ ಈಶ್ವರಪ್ಪ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಹಾಗೂ ಹಾಲಿ ಸಂಸದ ಬಿವೈ ವಿಜಯೇಂದ್ರಗೆ ಸವಾಲು ಹಾಕಿದ್ದಾರೆ. ಕಾಂಗ್ರೆಸ್‌ ಟಿಕೆಟ್‌ ನಿರೀಕ್ಷೆಯಲ್ಲಿದ್ದ ವಿನಯ್‌ಕುಮಾರ್‌ ಅವರು ಶಾಮನೂರು ಶಿವಶಂಕರಪ್ಪ ಸೊಸೆ, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ಪತ್ನಿ ಪ್ರಭಾಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ. ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬೆಳಗಾವಿಯಲ್ಲಿ ಜಗದೀಶ ಶೆಟ್ಟರ್, ಹುಬ್ಬಳ್ಳಿ-ಧಾರವಾಡದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಬೀದರ್‌ನಲ್ಲಿ ಭಗವಂತ ಖೂಬಾ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರು ಈ ಚುನಾವಣೆಯಲ್ಲಿ ರಾಜಕೀಯ ಅದೃಷ್ಟ ಪರೀಕ್ಷೆ ನಡೆಸುತ್ತಿದ್ದಾರೆ. ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ ಶ್ರೀರಾಮುಲು ವಿರುದ್ಧ ಸಂಡೂರು ಶಾಸಕ ಇ ತುಕಾರಾಂ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.

ಕಣಕ್ಕಿಳಿದಿರುವ ಯುವ ನಾಯಕರು

ಜಗದೀಶ್ ಶೆಟ್ಟರ್ ವಿರುದ್ಧ ಬೆಳಗಾವಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಬೀದರ್‌ನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಪುತ್ರ ಸಾಗರ್ ಖಂಡ್ರೆ ಅವರು ಖೂಬಾ ಅವರನ್ನು ಎದುರಿಸುತ್ತಿದ್ದಾರೆ. ಧಾರವಾಡದಲ್ಲಿ ಆನಂದ ಅಸೂಟಿ ಅವರು ಪ್ರಲ್ಹಾದ ಜೋಶಿ ವಿರುದ್ಧ ಕಣಕ್ಕಿಳಿದಿದ್ದಾರೆ.

ಮೇ 7ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಬಿಜಾಪುರ, ಚಿಕ್ಕೋಡಿ, ದಾವಣಗೆರೆ, ಧಾರವಾಡ, ಕಲಬುರಗಿ, ಹಾವೇರಿ, ಬಳ್ಳಾರಿ, ಕೊಪ್ಪಳ, ರಾಯಚೂರು, ಶಿವಮೊಗ್ಗ ಮತ್ತು ಉತ್ತರ ಕನ್ನಡದ 14 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

Latest Indian news

Popular Stories