
ಆಲರ್ಟ್: ಆಗಸ್ಟ್ 1ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದ ಪರಿಣಾಮ ನದಿ, ಕೆರೆ-ಕಟ್ಟೆಗಳು ಅಪಾಯದ ಮಟ್ಟದಲ್ಲಿ ತುಂಬಿ ಹರಿದು ಅವಾಂತರಗಳೇ ಸೃಷ್ಟಿಯಾಗಿವೆ. ಹಾಗೆಯೇ ಆಗಷ್ಟ್ 1ರ ವರೆಗೂ ಈ ಭಾಗಗಳಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಾವೇರಿ ಜಲಾನಯನ ಪ್ರದೇಶಗಳನ್ನು ಒಳಗೊಂಡಂತೆ ಆಗಸ್ಟ್ ಮೊದಲ ವಾರದವರೆಗೆ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದ್ದು, ಮುಂದಿನ ದಿನಗಳಲ್ಲಿ ಈ ಭಾಗಗಳಲ್ಲಿ ಮಳೆ ಮತ್ತಷ್ಟು ಚುರುಕು ಪಡೆಯುವ ಸಾಧ್ಯತೆ ಹೆಚ್ಚಿದೆ. ಅಲ್ಲದೆ ಮತ್ತೊಂದೆಡೆ, ಚಾಮರಾಜನಗರ, ದಾವಣಗೆರೆ, ಮೈಸೂರು, ಚಿತ್ರದುರ್ಗ, ಬೀದರ್, ಕೋಲಾರ, ಧಾರವಾಡ, ಕಲಬುರಗಿ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.
ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಹ ಮಳೆರಾಯ ಅಬ್ಬರಿಸಿ ಬೊಬ್ಬರೆಯಲಿದ್ದಾನೆ ಎನ್ನುವ ಮುನ್ಸೂಚನೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಸೇರಿದಂತೆ ಸುತ್ತಮುತ್ತಲಿನ ರಾಮನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲೂ ಉತ್ತಮ ಮಳೆ ಸುರಿಯಲಿದೆ ಎಂದು ತಿಳಿಸಿದೆ.




