ಬೆಂಗಳೂರು: ಹಿರಿಯ ರಾಜಕಾರಣಿ ವೈಎಸ್‌ವಿ ದತ್ತಾ ಅವರಿಗೆ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಮಿಸ್ ಆಗಿದೆ. ಈ ಹಿನ್ನೆಲೆ ಅವರು ಪಕ್ಷೇತರರಾಗಿ ಸ್ಪರ್ಧಿಸುವ ಸಾಧ್ಯತೆ ಇದ್ದು, ಅಭಿಮಾನಿಗಳ ಸಭೆ ಕರೆದಿದ್ದಾರೆ.
ಅಭಿಮಾನಿಗಳಿಗೆ ಭಾವುಕ ಪತ್ರ ಬರೆದಿರುವ ವೈಎಸ್‌ವಿ ದತ್ತಾ ನಿಮ್ಮ ಜೊತೆಗೆ ನಾನಿರಬೇಕು, ನನ್ನ ಜೊತೆ ನೀವಿರಬೇಕು. ಇದು ಅನಿವಾರ್ಯ ಎಂದು ಹೇಳಿದ್ದಾರೆ. ಕಡೂರಿನಲ್ಲಿ ಭಾನುವಾರ ಬೆಳಗ್ಗೆ 11 ಗಂಟೆಗೆ ಅಭಿಮಾನಿಗಳ ಸಭೆ ಕರೆದಿದ್ದು, ಮುಂದಿನ ನಿರ್ಧಾರ ಪ್ರಕಟಿಸುವ ನಿರೀಕ್ಷೆ ಇದೆ.
ವೈಎಸ್‌ವಿ ದತ್ತಾ ಅವರು ಮುಂದಿನ ರಾಜಕೀಯ ನಿಲುವುಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಏಪ್ರಿಲ್ 9 ರಂದು ಅಭಿಮಾನಿಗಳ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಮುಂದಿನ ನಡೆಯ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಭಿಮಾನಿಗಳ ಅಭಿಪ್ರಾಯದಂತೆ ಅವರು ತಮ್ಮ ಮುಂದಿನ ರಾಜಕೀಯ ಹೆಜ್ಜೆಯನ್ನು ಇಡುವ ಸಾಧ್ಯತೆ ದಟ್ಟವಾಗಿದೆ.
ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ದತ್ತಾ ಅವರು ತಮ್ಮ ಅಭಿಮಾನಿಗಳಿಗೆ ಭಾವುಕ ಪತ್ರವನ್ನು ಬರೆದಿದ್ದಾರೆ. ನೀವು ನನಗೆ ಪ್ರೀತಿಯನ್ನು ಧಾರೆ ಎರೆದಿದ್ದೀರಿ. ಹಣವಿಲ್ಲದ, ಜಾತಿ ಇಲ್ಲದ ನನ್ನನ್ನು ದತ್ತಣ್ಣ, ನಮ್ಮ ದತ್ತಣ್ಣ ಎಂದು ಅಭಿಮಾನದಿಂದ ತಬ್ಬಿಕೊಂಡು ಬೆಳೆದಿದ್ದೀರಿ. ಈಗ ಬಂದಿರುವ ವಿಶೇಷ ರಾಜಕೀಯ ಪರಿಸ್ಥಿತಿಯಲ್ಲಿ ನಿಮ್ಮ ಜೊತೆಗೆ ನಾನಿರಬೇಕು ಹಾಗೂ ನನ್ನ ಜೊತೆಗೆ ನೀವಿರಬೇಕು ಎಂಬುದು ಅನಿವಾರ್ಯವಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ.
ಜೆಡಿಎಸ್ ತೊರೆದ ವೈಎಸ್‌ವಿ ದತ್ತಾಗೆ ಮರಳಿ ಜೆಡಿಎಸ್ ಕಡೆ ಸೆಳೆದುಕೊಳ್ಳಲು ಮಾಜಿ ಸಚಿವ ಎಚ್‌ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರು ಪ್ರಯತ್ನ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಟಿಕೆಟ್ ಭರವಸೆ ನೀಡಿಯೇ ದತ್ತಾ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಕೊನೆಯ ಗಳಿಗೆಯಲ್ಲಿ ಟಿಕೆಟ್ ತಪ್ಪಿಸಲಾಗಿದೆ. ಟಿಕೆಟ್ ನೀಡದೆ ಇರಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆಗಿನ ಮುನಿಸು ಕಾರಣ ಎಂಬ ಮಾತೂ ಕೇಳಿಬರುತ್ತಿದೆ.
ದತ್ತಾ ಅವರಿಗೆ ಟಿಕೆಟ್ ಕೊಡಿಸಲು ಸಿದ್ದರಾಮಯ್ಯ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಸಿದ್ದರಾಮಯ್ಯ ಸಲಹೆಯಂತೆ ಅವರು ಜೆಡಿಎಸ್ ತೊರೆದು ಕಾಂಗ್ರೆಸ್ ಬಂದಿದ್ದರು. ಕಡೂರು ಕ್ಷೇತ್ರಕ್ಕೆ ಸಹಜವಾಗಿ ಅವರು ಟಿಕೆಟ್ ಆಕಾಂಕ್ಷಿ ಆಗಿದ್ದರು. ಆದರೆ ಕೊನೆಯ ಗಳಿಗೆಯಲ್ಲಿ ಆನಂದ್ ಕೆ.ಎಸ್ ಅವರಿಗೆ ಟಿಕೆಟ್ ನೀಡಲಾಗಿದೆ.