ಹಾವೇರಿಯಲ್ಲಿ ಭೀಕರ ಅಪಘಾತಕ್ಕೆ 13 ಮಂದಿ ಬಲಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿದ್ದರಾಮಯ್ಯ

ಹಾವೇರಿ, ಜೂನ್‌ 28: ಇಂದು ಬೆಳ್ಳಂಬೆಳಗ್ಗೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 13 ಜನರು ಮೃತಪಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ.ಪರಿಹಾರ ಘೋಷಣೆ ಮಾಡಿದ್ದಾರೆ.

ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ, ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರು ಹೇಳಿದರು.

ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದರು.

ಹಾವೇರಿ ಜಿಲ್ಲೆಯ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 4 ವರ್ಷ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸೇರಿ 13 ಜನ ಮೃತಪಟ್ಟ ಘಟನೆ ಮಮ್ಮಲ ಮರುಗುವಂತೆ ಮಾಡಿದೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರಾಗಿದ್ದು ಮೃತರ ಕುಟುಂಬಕ್ಕೆ ಆಘಾತ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ, ಅಗಲಿದ ಆತ್ಮಗಳಿಗೆ ಚಿರಶಾಂತಿ ದೊರೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸಂತಾಪ ಸೂಚಿಸಿದರು.

Latest Indian news

Popular Stories