ಪಾಕ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟ: 28 ಮಂದಿ  ಮೃತ್ಯು, 90ಕ್ಕೂ ಹೆಚ್ಚು ಮಂದಿಗೆ ಗಾಯ!

ಪೇಶಾವರ: ಪೇಶಾವರದ ಪೊಲೀಸ್ ಲೈನ್ಸ್ ಪ್ರದೇಶದ ಮಸೀದಿಯೊಂದರಲ್ಲಿ ಇಂದು ನಡೆದ ಪ್ರಬಲ ಆತ್ಮಹತ್ಯಾ ಸ್ಫೋಟದಲ್ಲಿ 28 ಮಂದಿ ಮೃತಪಟ್ಟಿದ್ದು, 90ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಭದ್ರತಾ ಮತ್ತು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಅಧಿಕಾರಿಗಳ ಪ್ರಕಾರ, ಆತ್ಮಹತ್ಯಾ ದಾಳಿಕೋರನು ಪ್ರಾರ್ಥನೆಯ ಸಮಯದಲ್ಲಿ ಮುಂದಿನ ಸಾಲಿನಲ್ಲಿದ್ದು ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಪರಿಣಾಮ ಜೊಹ್ರ್ ಪ್ರಾರ್ಥನೆ ಸಲ್ಲಿಸುತ್ತಿದ್ದ 90ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದೆ. 

ಸ್ಫೋಟದಲ್ಲಿ ಗಾಯಗೊಂಡಿರುವವರ ಪೈಕಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇವೆ. ಸದ್ಯ ಗಾಯಾಳುಗಳನ್ನು ಪೇಶಾವರ ಲೇಡಿ ರೀಡಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಫೋಟದಲ್ಲಿ 28 ಮಂದಿ ಮೃತಪಟ್ಟಿದ್ದಾರೆ. ಇನ್ನು 90 ಮಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇದರಲ್ಲಿ 10ಕ್ಕೂ ಹೆಚ್ಚು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಆತ್ಮಾಹುತಿ ಬಾಂಬ್ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಪ್ರಧಾನಿ ಶಹಬಾಜ್ ಷರೀಫ್ ಅವರು, ಸಂತ್ರಸ್ತರಿಗೆ ಸಾಧ್ಯವಾದಷ್ಟು ಉತ್ತಮ ವೈದ್ಯಕೀಯ ಚಿಕಿತ್ಸೆ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಅಲ್ಲದೆ ದಾಳಿಯ ಹಿಂದಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ  ಭರವಸೆ ನೀಡಿದ್ದಾರೆ.

Latest Indian news

Popular Stories