ಲಿಮಾ (ಪೆರು): ವಾಯುವ್ಯ ಪೆರುವಿನಲ್ಲಿ ಬಸ್ಸೊಂದು ಬಂಡೆಯೊಂದಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ 24 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಶನಿವಾರ ನಡೆದಿದೆ.
ಕೊರಿಯಾಂಕಾ ಟೂರ್ಸ್ ಕಂಪನಿಗೆ ಸೇರಿದ ಬಸ್ 60 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿತ್ತು. ಲಿಮಾದಿಂದ ಹೊರಟ ಬಸ್ ಈಕ್ವೆಡಾರ್ ಗಡಿಯಲ್ಲಿರುವ ತುಂಬೆಸ್‌ಗೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
“ಡೆವಿಲ್ಸ್ ಕರ್ವ್” ಎಂದು ಕರೆಯಲ್ಪಡುವ ಸ್ಥಳದಲ್ಲಿ ಅಪಘಾತ ಸಂಭವಿಸಿದೆ ಎಂದು ಸ್ಥಳದಲ್ಲಿದ್ದ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆ ವೇಳೆ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ರಕ್ಷಣೆ ಮಾಡಿರುವ ಪೊಲೀಸರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.