ಪೊನ್ನಂಪೇಟೆ,ನ. 07: ರಾಜ್ಯಾದ್ಯಂತ ನಿರಂತರವಾಗಿ ದ್ವೇಷ ಭಾಷಣ ಮಾಡಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿರುವ ಬಿಜೆಪಿಯ ಕೆಲ ನಾಯಕರ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ದೂರು ಸಲ್ಲಿಸಲಾಗಿದೆ. ಘಟಕದ ಅಧ್ಯಕ್ಷರಾದ ಪಿ.ಎ. ಹನೀಫ್ ಅವರ ನೇತೃತ್ವದಲ್ಲಿ ತೆರಳಿದ ಕಾಂಗ್ರೆಸ್ ಪದಾಧಿಕಾರಿಗಳ ನಿಯೋಗ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನೀಡಬೇಕಾಗಿದ್ದ ದೂರನ್ನು ಮಡಿಕೇರಿ ಡಿವೈಎಸ್ಪಿ ಅವರಿಗೆ ಹಸ್ತಾಂತರಿಸಿತು.
ಇತ್ತೀಚೆಗೆ ಬಿಜಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕರುಗಳಾದ ಸಿ.ಟಿ. ರವಿ, ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಚಕ್ರವರ್ತಿ ಸೂಲಿಬೆಲೆ ಅವರು ಭಾಷಣ ಮಾಡುವಾಗ ಮುಸ್ಲಿಂ ಸಮುದಾಯವನ್ನು ಗುರಿಯಾಗಿಟ್ಟು ದ್ವೇಷದ ಮಾತನಾಡಿದ್ದಾರೆ. ಅಲ್ಲದೆ ಇವರು ನಿರಂತರವಾಗಿ ಮುಸ್ಲಿಂ ಸಮುದಾಯವನ್ನು ಅವಮಾನಿಸುವ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಹನೀಫ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಅವರ ನಿರ್ದೇಶನದಂತೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಈ ಸಂಬಂಧಿಸಿದಂತೆ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂವಿಧಾನ ವಿರೋಧಿ ಹೇಳಿಕೆ ಮತ್ತು ದ್ವೇಷ ಭಾಷಣದ ಮೂಲಕ ಈ ಬಿಜೆಪಿ ನಾಯಕರು ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುತ್ತಿದ್ದು, ರಾಜ್ಯದಲ್ಲಿ ಆಗಿಂದ್ದಾಗೆ ಅಶಾಂತಿಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ತೀವ್ರವಾಗಿ ಖಂಡಿಸಲಾಗುವುದು. ಈ ನಾಯಕರ ದ್ವೇಷ ಭಾಷಣಕ್ಕೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಯಂತ್ರಣ ಹೇರಬೇಕಿದೆ. ಅಲ್ಲದೆ ಇವರು ಇದುವರೆಗೂ ಮಾಡಿದ ದ್ವೇಷ ಭಾಷಣದ ವಿರುದ್ಧ ಕೂಡಲೇ ದೂರು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇವರ ಚಲನವಲನಗಳ ವಿರುದ್ಧ ಪೊಲೀಸ್ ಇಲಾಖೆ ವಿಶೇಷ ನಿಗಾ ವಹಿಸಬೇಕು ಎಂದು ಹನೀಫ್ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಪೊಲೀಸರಿಗೆ ದೂರು ಸಲ್ಲಿಸಿದ ನಿಯೋಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾದ ಖಲೀಲ್ ಭಾಷಾ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೋಳುಮಂಡ ರಫೀಕ್, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಜುನೈದ್, ಮಡಿಕೇರಿ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಕೌಸರ್, ಡಿಸಿಸಿ ಸದಸ್ಯರಾದ ಅಬ್ದುಲ್ ರಹಿಮಾನ್ (ಅಂದಾಯಿ), ಸಾಧಿಕ್ ಮೊದಲಾದವರು ಹಾಜರಿದ್ದರು.