ಪ್ರಜಾಪ್ರಭುತ್ವ ಮೌಲ್ಯವನ್ನು ಪ್ರತಿಯೊಬ್ಬರೂ ಎತ್ತಿಹಿಡಿಯುವಂತಾಗಬೇಕು – ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು

ಪ್ರಜಾಪ್ರಭುತ್ವ ಮೌಲ್ಯವನ್ನು ಪ್ರತಿಯೊಬ್ಬರೂ ಎತ್ತಿಹಿಡಿಯುವಂತಾಗಬೇಕು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು ಹೇಳಿದರು.

  
ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಬೀದರ್ ಜಿಲ್ಲೆಯ ಬಸವಕಲ್ಯಾಣದಿಂದ  ಚಾಮರಾಜನಗರ ವರೆಗೆ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ಪ್ರಯುಕ್ತ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಭಾನುವಾರ ನಡೆದ ಮಾನವ ಸರಪಳಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.


ರಾಷ್ಟ್ರದಲ್ಲಿ ಪ್ರಜಾಪ್ರಭುತ್ವ ಜಾರಿಯಾದ ನಂತರ ನಾಗರಿಕರ ಬದುಕು ಸುಧಾರಿಸುತ್ತಿದೆ. ಆ ದಿಸೆಯಲ್ಲಿ ಪ್ರತಿಯೊಬ್ಬರಿಗೂ ಸಮಾನವಾಗಿ ಬದುಕುವ ಹಕ್ಕನ್ನು ಸಂವಿಧಾನದಲ್ಲಿ ಕಲ್ಪಿಸಲಾಗಿದೆ ಎಂದು ಎನ್.ಎಸ್.ಭೋಸರಾಜು ಅವರು ಹೇಳಿದರು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ‌ ಮತ್ತು ಸಹೋದರತೆ… ಈ ಅಂಶಗಳು ಪ್ರಜಾಪ್ರಭುತ್ವದ ಆಶಯಗಳಾಗಿವೆ ಎಂದು ಸಚಿವರು ತಿಳಿಸಿದರು.


ಜಾತಿ, ಮತ, ಲಿಂಗ, ಧರ್ಮ ಹಾಗೂ ಯಾವುದೇ ರೀತಿಯ ಭೇದಭಾವ ಇಲ್ಲದೆ, ಸರ್ವರಿಗೂ ಸಮಾನತೆ, ಸ್ವಾತಂತ್ರ್ಯ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಒದಗಿಸುವುದು ಪ್ರಜಾಪ್ರಭುತ್ವದ ಮೂಲ ಮಂತ್ರವಾಗಿದೆ ಎಂದು ಸಚಿವರು ನುಡಿದರು.


ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು, ವಿದ್ಯಾರ್ಥಿಗಳು, ಶಿಕ್ಷಕರು ಪೊಲೀಸರು ಹೀಗೆ ಹಲವರು ಮಾನವ ಸರಪಳಿ ಹಾಗೂ ರಿಲೇ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿರುವುದು ಶ್ಲಾಘನೀಯ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.


ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ಮಾತನಾಡಿ ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ಪ್ರಜಾಪ್ರಭುತ್ವ ಇದ್ದು, ಆ ನಿಟ್ಟಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಬ್ಬ ವಯಸ್ಕರಿಗೂ ಮತ ಚಲಾಯಿಸುವ ಹಕ್ಕನ್ನು ನೀಡಿದ್ದಾರೆ ಎಂದು ತಿಳಿಸಿದರು.


ಸ್ವಾತಂತ್ರ್ಯ ಹಾಗೂ ಪ್ರಜಾಪ್ರಭುತ್ವಕ್ಕೆ ಹಲವರು ಹೋರಾಟ ಮಾಡಿದ್ದು, ಅವರನ್ನು ಮರೆಯುವಂತಿಲ್ಲ ಎಂದು ಎ.ಎಸ್.ಪೊನ್ನಣ್ಣ ಅವರು ಹೇಳಿದರು.


ಪ್ರಜಾಪ್ರಭುತ್ವದಲ್ಲಿ ಸಮಾನತೆ, ಸಹೋದರತೆ, ಭ್ರಾತೃತ್ವ ಹೀಗೆ ಹಲವು ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಪೊನ್ನಣ್ಣ ಅವರು ವಿವರಿಸಿದರು.


ರಾಷ್ಟ್ರದ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳ ಜತೆಗೆ ಕರ್ತವ್ಯಗಳನ್ನು ವಿವರಿಸಲಾಗಿದೆ. ಆ ನಿಟ್ಟಿನಲ್ಲಿ ಮೂಲಭೂತ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯಗಳನ್ನು ಮರೆಯಬಾರದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ವಿವರಿಸಿದರು.


ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಪ್ರಯುಕ್ತ ಪ್ರಜಾಪ್ರಭುತ್ವ ಮೌಲ್ಯವನ್ನು ತಿಳಿಸುವಲ್ಲಿ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಮಾನವ ಸರಪಳಿ ಒಂದು ಉತ್ತಮ ಕಾರ್ಯಕ್ರಮ ಆಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚಿಸುವ ಮೂಲಕ ರಾಷ್ಟ್ರದ ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸಿದ್ದಾರೆ. ಇವರ ಪ್ರಯತ್ನದಿಂದ ನಾವುಗಳು ಇಂದು ಜನರ ಪ್ರತಿನಿಧಿಯಾಗಿ ಪಾಲ್ಗೊಳ್ಳಲು ಅವಕಾಶವಾಗಿದೆ ಎಂದು ಡಾ.ಮಂತರ್ ಗೌಡ ಅವರು ಅಭಿಪ್ರಾಯ ಪಟ್ಟರು.
ಸಮಾಜದಲ್ಲಿ ಬಡವ-ಬಲ್ಲಿದ, ಮೇಲು-ಕೀಳು ಎಂಬ ಭಾವನೆ ಇಲ್ಲದೆ, ಎಲ್ಲರೂ ಸಮಾನರು ಎಂಬುದು ಪ್ರತಿಯೊಬ್ಬರಲ್ಲಿಯೂ ಇರಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸಹ ಇತರರಂತೆ ಬದುಕು ಕಟ್ಟಿಕೊಂಡಾಗ ಪ್ರಜಾಪ್ರಭುತ್ವದ ಆಶಯಕ್ಕೆ ಮೌಲ್ಯ ದೊರೆಯಲಿದೆ ಎಂದು ಡಾ.ಮಂತರ್ ಗೌಡ ಅವರು ಪ್ರತಿಪಾದಿಸಿದರು.


ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸಂವಿಧಾನ ಪೀಠಿಕೆ ವಾಚಿಸಿದರು.


ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್, ಸಮಾಜ ಕಲ್ಯಾಣ ಇಲಾಖಾಯ ಜಿಲ್ಲಾ ನೋಡಲ್ ಅಧಿಕಾರಿ ರಾಜೇಶ್ ಗೌಡ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಸ್ಕೌಟ್ಸ್ ಮತ್ತು ಗೈಡ್ ನ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ಪ್ರಮುಖರಾದ ಎಚ್.ಎಲ್.ದಿವಾಕರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.


ಮಾನವ ಸರಪಳಿ ಸಂದರ್ಭದಲ್ಲಿ ಗಣ್ಯರು ಸಾಲಾಗಿ ನಿಂತು ಕೈ ಮೇಲೆ ಮಾಡುವ ಮೂಲಕ ಜೈ ಹಿಂದ್ ಜೈ ಕರ್ನಾಟಕ ಘೋಷ ವಾಕ್ಯ ಮೊಳಗಿಸಿದರು. ರೇವತಿ ಮತ್ತು ತಂಡದವರು ನಾಡಗೀತೆ ಹಾಡಿದರು‌.


ಭಾನುವಾರ ನಡೆದ ಮಾನವ ಸರಪಳಿ ಸಂದರ್ಭದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಪಾಲ್ಗೊಂಡಿದ್ದರು. ಕಲಾವಿದ ಈ.ರಾಜು ತಂಡದವರು ಗೀತಗಾಯನ ನಡೆಸಿಕೊಟ್ಟರು, ಬಸವನಹಳ್ಳಿ ಮೊರಾರ್ಜಿ ವಸತಿ ಶಾಲೆಯ ಆದಿವಾಸಿ ವಿದ್ಯಾರ್ಥಿಗಳು ಗಿರಿಜನ ನೃತ್ಯ ಪ್ರದರ್ಶಿಸಿದರು, ಡೊಳ್ಳು ಕುಣಿತ ಹಾಗೂ ಲಂಬಾಣಿ ನೃತ್ಯ ಪ್ರದರ್ಶನ ಗಮನ ಸೆಳೆಯಿತು. ವಿದ್ಯಾರ್ಥಿಗಳಿಬ್ಬರು ಅಂಬೇಡ್ಕರ್ ಅವರ ವೇಷದಲ್ಲಿ ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು. ಪೊಲೀಸ್ ಇಲಾಖೆಯಿಂದ ಬೈಕ್ ಮೂಲಕ ರಿಲೇ ನಡೆಸಿದ್ದು, ಗಮನ ಸೆಳೆಯಿತು.

Latest Indian news

Popular Stories