Lಮಡಿಕೇರಿ: ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನೆಲೆ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ. ಹಾಗೆಯೇ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ. ಆದ್ದರಿಂದ ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಹಾರಂಗಿ ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವ ಮುನ್ನೆಚ್ಚರಿಕೆ ಹಿನ್ನೆಲೆ ಹಾರಂಗಿ ಜಲಾಶಯದಿಂದ ನದಿಗೆ 1 ಸಾವಿರ ಕ್ಯೂಸೆಕ್ ಪ್ರಮಾಣದ ನೀರನ್ನು ಸೋಮವಾರ ಬಿಡುಗಡೆಗೊಳಿಸಲಾಯಿತು.
ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಜಲಾಶಯದ 4 ಕ್ರಸ್ಟ್ ಗೇಟ್ ಗಳಿಗೆ ಪೂಜೆ ಸಲ್ಲಿಸಿ ನೀರು ಬಿಡುಗಡೆಗೊಳಿಸಿದರು. ಈ ಸಂದರ್ಭ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಪುಟ್ಟಸ್ವಾಮಿ, ಸ್ಥಳೀಯ ಗ್ರಾ.ಪಂ.ಅಧ್ಯಕ್ಷರು, ಸದಸ್ಯರುಗಳು ಹಾಜರಿದ್ದರು.