ಮಡಿಕೇರಿ ಸೆ.20 (ದಿ ಹಿಂದುಸ್ತಾನ್ ಗಝೆಟ್)
ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆ ಸಹಕಾರಿಯಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯ ಅವರು ತಿಳಿಸಿದ್ದಾರೆ.
ನಗರದ ಸ್ಕೌಟ್ಸ್ ಮತ್ತು ಗೈಡ್ಸ್‍ನ ಪೊನ್ನಮ್ಮ ಕುಶಾಲಪ್ಪ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಸಂಯುಕ್ತಾಶ್ರಯದಲ್ಲಿ ಕೊಡಗು ಜಿಲ್ಲೆಯ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಬುಧವಾರ ಏರ್ಪಡಿಸಲಾಗಿದ್ದ ಮಾಹಿತಿ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಓದು ಬರಹ ಕಲಿಯುವುದರ ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಶಿಸ್ತು, ಶ್ರದ್ಧೆ, ಸಮಯಪ್ರಜ್ಞೆ, ಸಂಯಮ, ಪರಿಸರ ಕಾಳಜಿ ಬೆಳೆಸಿಕೊಂಡು ಜೀವನದಲ್ಲಿ ಉತ್ತಮ ನಾಗರಿಕರಾಗಿ ಬದುಕಲು ಅನುಕೂಲವಾಗಲಿದೆ ಎಂದು ಪಿ.ಜಿ.ಆರ್.ಸಿಂಧ್ಯ ಅವರು ಹೇಳಿದರು.
ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಾಮಾಜಿಕ ಕಾಳಜಿ ಅರಿವನ್ನು ಮೂಡಿಸುವ ಕೆಲಸ ಹೆಚ್ಚಾಗಬೇಕು. ಪರಿಸರ ಜಾಗೃತಿ, ಸ್ವಚ್ಛತೆ ಅತ್ಯಂತ ಮಹತ್ವದ್ದಾಗಿದ್ದು, ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಯೋಗದ ಪರಿಕಲ್ಪನೆಯನ್ನು ಮಕ್ಕಳಲ್ಲಿ ಮೂಡಿಸಬೇಕು ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಜ್ಯ ಆಯುಕ್ತರು ತಿಳಿಸಿದರು.
ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕವನ್ನು ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ನಾಗರಿಕ ಪ್ರಜ್ಷೆ ಬೆಳೆಸಬೇಕು ಎಂದು ಪಿ.ಜಿ.ಆರ್.ಸಿಂಧ್ಯ ಅವರು ಹೇಳಿದರು.
ಸ್ಕೌಟ್ಸ್ ಮತ್ತು ಗೈಡ್ಸ್‍ನ ರಾಷ್ಟ್ರೀಯ ಸಮಿತಿ ಮಾಜಿ ನಿರ್ದೇಶಕರಾದ ಸುಕುಮಾರನ್ ಅವರು ಮಾತನಾಡಿ ಸಂಸ್ಥೆಯ ಮೂಲಕ ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಉತ್ತಮ ಜೀವನ ಕೌಶಲ್ಯವನ್ನು ಕಲಿಸುವುದರೊಂದಿಗೆ ರಾಷ್ಟ್ರೀಯ ಭಾವೈಕ್ಯತೆ ಬೆಳೆಸಲು ಸಹಕಾರಿಯಾಗಿದೆ ಎಂದರು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ಅವರು ಮಾತನಾಡಿ ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಘಟಕಗಳನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಂಯಮ, ರಾಷ್ಟ್ರಪ್ರೇಮ ಬೆಳೆಸಲು ಕ್ರಮವಹಿಸಲಾಗುವುದು ಎಂದರು.
ಸ್ಕೌಟ್ಸ್ ಸಂಸ್ಥೆಯ ರಾಜ್ಯ ಆಯುಕ್ತರಾದ ಪ್ರಭಾಕರ ಭಟ್ ಅವರು ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ತತ್ವಗಳು, ಶಿಕ್ಷಣ ಇಲಾಖೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‍ನ ಅನುಷ್ಠಾನ ಕುರಿತು ಮಾಹಿತಿ ನೀಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್‍ನ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ ಅವರು ಮಾತನಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ಜಿಲ್ಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಗಳನ್ನು ಉತ್ತಮವಾಗಿ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಗೈಡ್ಸ್ ಸಂಸ್ಥೆಯ ತರಬೇತಿ ಆಯುಕ್ತೆ ಮೈಥಿಲಿ ರಾವ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಕುರಿತು ತರಬೇತಿ ನೀಡಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕøತರು ಹಾಗೂ ಜಿಲ್ಲಾ ಗೈಡ್ಸ್ ಸಂಸ್ಥೆಯ ಆಯುಕ್ತರಾದ ರಾಣಿ ಮಾಚಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ದೊಡ್ಡೇಗೌಡ, ಪ್ರಕಾಶ್, ಮಂಜೇಶ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಡಿಡಿಪಿಐ ಕಚೇರಿಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಕೃಷ್ಣಪ್ಪ, ಸ್ಕೌಟ್ಸ್ ಮತ್ತು ಗೈಡ್ಸ್‍ನ ಸ್ಥಾನಿಕ ಆಯುಕ್ತರಾದ ಎಚ್.ಆರ್.ಮುತ್ತಪ್ಪ, ಗುರುರಾಜ್, ಜಿಲ್ಲಾ ಖಜಾಂಜಿ ಪುಷ್ಪವೇಣಿ, ಸಹ ಕಾರ್ಯದರ್ಶಿ ಬೊಳ್ಳಜ್ಜಿರ ಅಯ್ಯಪ್ಪ, ಬುಲ್‍ಬುಲ್ ವಿಭಾಗದ ಮುಖ್ಯಸ್ಥರಾದ ಡೈಸಿ, ಸಾರ್ವಜನಿಕ ಸಂಪರ್ಕ ಅಧಿಕಾರಿ ಟಿ.ಜಿ.ಪ್ರೇಮ್ ಕುಮಾರ್, ಸಮನ್ವಯಾಧಿಕಾರಿ ದಮಯಂತಿ, ಹರಿಣಿ, ವಿಜಯ್, ಸುಲೋಚನ, ವನಜಾಕ್ಷಿ, ಹೇಮಂತ್, ಗುರುರಾಜ್, ಗಾಯತ್ರಿ, ಧನಂಜಯ, ಉಷಾರಾಣಿ, ನಳಿನಾಕ್ಷಿ, ಇತರರು ಇದ್ದರು. ಸದಾಶಿವ ಪಲ್ಲೇದ್ ಸ್ವಾಗತಿಸಿದರು. ಅಲೀಮಾ ನಿರೂಪಿಸಿದರು, ಉಷಾರಾಣಿ ವಂದಿಸಿದರು.