ಕುಡಿಯುವ ನೀರು ಪೂರೈಕೆ ಹಾಗೂ ಚುನಾವಣಾ ಕರ್ತವ್ಯ ಸರಿಯಾಗಿ ನಿರ್ವಹಿಸಿ: ಡಿಸಿ

ಮಡಿಕೇರಿ:ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ವ್ಯತ್ಯಯ ಆಗದಂತೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಬರ ನಿರ್ವಹಣೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಬೇಸಿಗೆ ಜೊತೆಗೆ ಲೋಕಸಭಾ ಚುನಾವಣೆ ಶೀಘ್ರ ಪ್ರಕಟವಾಗಲಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಜೊತೆಗೆ ಚುನಾವಣಾ ಕರ್ತವ್ಯವನ್ನು ಅಧಿಕಾರಿಗಳು ಸಮನ್ವಯತೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಚುನಾವಣೆ ಪ್ರಕಟ ದಿನದಿಂದ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸಬೇಕು. ಚುನಾವಣೆ ದಿನಾಂಕ ಪ್ರಕಟವಾದ ದಿನದಂದೇ ಹೆದ್ದಾರಿ ಫಲಕದಲ್ಲಿನ ಪೋಸ್ಟರ್‍ಗಳನ್ನು ತೆರವುಗೊಳಿಸಬೇಕು, ಈ ಕಾರ್ಯವನ್ನು ಚುನಾವಣೆ ಪ್ರಕಟವಾದ ತಕ್ಷಣವೇ ನಿರ್ವಹಿಸುವಂತೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ, ಕುಡಿಯುವ ನೀರು ಪೂರೈಕೆ ಜೊತೆಗೆ ಸುಗಮ, ಸುಲಲಿತ ಹಾಗೂ ನಿಷ್ಪಕ್ಷಪಾತ ಚುನಾವಣೆ ನಡೆಸಲು ಅಧಿಕಾರಿಗಳು ಮುಂದಾಗಬೇಕು ಎಂದರು.

ಎಲ್ಲಾ ಮತಗಟ್ಟೆಗಳಲ್ಲಿ ರ್ಯಾಂಪ್ ವ್ಯವಸ್ಥೆ ಸುಸ್ಥಿತಿಯಲ್ಲಿರಬೇಕು. ಸಣ್ಣ ಪುಟ್ಟ ಸಮಸ್ಯೆಗಳಿದ್ದಲ್ಲಿ ಸರಿಪಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ವರ್ಣಿತ್ ನೇಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ವಿವಿಧ ಇಲಾಖೆ ಅಧಿಕಾರಿಗಳು, ಎಂಜಿನಿಯರ್‍ಗಳು, ತಹಶೀಲ್ದಾರರು, ವಿವಿಧ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಇತರರು ಇದ್ದರು.

Latest Indian news

Popular Stories