ಮಡಿಕೇರಿ, ಜುಲೈ 09: ಕೊಡಗು ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿರುವ ಹಾರಂಗಿ ಜಲಾಶಯ ಭರ್ತಿಯಾಗುವ ಮುನ್ನವೇ ಸೋಮವಾರ ಸಂಜೆ 1 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
ಕೊಡಗು ಜಿಲ್ಲಾಡಳಿತದ ಮಾಹಿತಿಯಂತೆ ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು.
ಸೋಮವಾರದ ನೀರಿನ ಮಟ್ಟ 2,848 ಅಡಿಗಳು. 2,394 ಕ್ಯುಸೆಕ್ ಒಳಹರಿವು ಡ್ಯಾಂಗೆ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ 4 ಗೇಟ್‌ಗಳ ಮೂಲಕ 1 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
ಹಾರಂಗಿ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಆದ್ದರಿಂದ ಹಾರಂಗಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣವೂ ಹೆಚ್ಚಾಗುತ್ತಿರುತ್ತದೆ. ಹಾಗೆಯೇ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಲಾನಯನ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಂಭವವಿದ್ದು, ಒಳಹರಿವಿನ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ಜಲಾಶಯವು ಶೀಘ್ರವೇ ಗರಿಷ್ಠ ಮಟ್ಟ ತಲುಪುವುದರಿಂದ ನದಿಗೆ ಹೆಚ್ಚುವರಿ ನೀರನ್ನು ಹರಿಸಲಾಗುತ್ತದೆ. ಆದ್ದರಿಂದ ಹಾರಂಗಿ ಮತ್ತು ಕಾವೇರಿ ನದಿಯ ಪಾತ್ರದಲ್ಲಿರುವ ಮತ್ತು ನದಿಯ ಎರಡು ದಂಡೆಯಲ್ಲಿ ವಾಸಿಸುತ್ತಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜನಜಾನುವಾರು ರಕ್ಷಣೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಹಾರಂಗಿ ಪುನರ್ವಸತಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಪುಟ್ಟಸ್ವಾಮಿ ಮನವಿ ಮಾಡಿದ್ದಾರೆ.