ಇಂಫಾಲ್: ಮಣಿಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಅನಧಿಕೃತ ಮೂಲಗಳು ತಿಳಿಸಿವೆ.
ಇಂದು ಇಂಫಾಲ್ ಕಣಿವೆಯಲ್ಲಿ ಜನ ಜೀವನ ಸಹಜ ಸ್ಥಿತಿಗೆ ಮರಳಿದ್ದು, ಅಂಗಡಿಗಳು ಮತ್ತು ಮಾರುಕಟ್ಟೆಗಳು ಎಂದಿನಂತೆ ಆರಂಭವಾಗಿವೆ. ರಸ್ತೆಗಳಲ್ಲಿ ವಾಹನಗಳ ಸಂಚಾರ ಸಹ ಆರಂಭವಾಗಿದೆ.
ಇಂಫಾಲ್ ನ ಪ್ರಮುಖ ಪ್ರದೇಶಗಳು ಮತ್ತು ರಸ್ತೆಗಳಲ್ಲಿ ಹೆಚ್ಚಿನ ಸೇನಾ ಪಡೆಗಳು ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ ಹಾಗೂ ಕೇಂದ್ರ ಪೊಲೀಸ್ ಪಡೆಗಳ ನಿಯೋಜನೆ ಮೂಲಕ ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
ಮಣಿಪುರ ಹಿಂಸಾಚಾರದಲ್ಲಿ ಇದುವರೆಗೆ 54 ಮಂದಿ ಮೃತಪಟ್ಟಿದ್ದು, ಈ ಪೈಕಿ 16 ಶವಗಳನ್ನು ಚುರಾಚಂದ್‌ಪುರ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. 15 ಮೃತದೇಹಗಳು ಇಂಫಾಲ್ ಪೂರ್ವ ಜಿಲ್ಲೆಯ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್‌ನಲ್ಲಿರುವ ರೀಜನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಏತನ್ಮಧ್ಯೆ, ಶುಕ್ರವಾರ ರಾತ್ರಿ ಚುರಾಚಂದ್‌ಪುರ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಐವರು ಗುಡ್ಡಗಾಡು ಮೂಲದ ಉಗ್ರರನ್ನು ಹತ್ಯೆ ಮಾಡಲಾಗಿದೆ. ಈ ವೇಳೆ ಇಂಡಿಯಾ ರಿಸರ್ವ್ ಬೆಟಾಲಿಯನ್ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.