ಸೂರತ್: ಮೋದಿ ಉಪನಾಮದ ಕುರಿತಾದ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡಲು ಸೂರತ್ ಕೋರ್ಟ್ ನಿರಾಕರಿಸಿದ್ದು, ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಈ ಹಿಂದೆ ರಾಹುಲ್ ಗಾಂಧಿಯವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದಕ್ಕೆ ನ್ಯಾಯಾಲಯ ನಿರಾಕರಿಸಿದ್ದು, ಅರ್ಜಿಯನ್ನು ವಜಾಗೊಳಿಸಿದೆ.
ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.
ವಯನಾಡ್ ನ ಲೋಕಸಭಾ ಸಂಸದರಾದ ರಾಹುಲ್ ಗಾಂಧಿ ಅವರನ್ನು ಸೂರತ್ ನ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಸೆಕ್ಷನ್ 499 ಮತ್ತು 500 (ಮಾನನಷ್ಟ) ಅಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅನರ್ಹಗೊಳಿಸಲಾಗಿತ್ತು.