ಸುಗಮ ಚುನಾವಣೆಗೆ ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ : ಜಿಲ್ಲಾಧಿಕಾರಿ

ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಲ್ಲಿ ಸುಗಮ ರೀತಿಯಲ್ಲಿ ಮತದಾನ ಮತ್ತು ಚುನಾವಣಾ ಪ್ರಕ್ರಿಯೆಗಳು ನಡೆಯುವಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸೆಕ್ಟರ್ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ , ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿರುವ ಸೆಕ್ಟರ್ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನಗಳು ಮತ್ತು ಮಾರ್ಗಸೂಚಿಗಳಂತೆ ಸೆಕ್ಟರ್ ಅಧಿಕಾರಿಗಳು ಕಾರ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು, ಎಲ್ಲಾ ಸೆಕ್ಟರ್ ಅಧಿಕಾರಿಗಳು ತಮ್ಮ ಅಧೀನದ ಪಿ.ಆರ್.ಓ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಅಗತ್ಯ ತರಬೇತಿಯನ್ನು ನೀಡಿ, ಮತದಾನದ ದಿನದಂದು ಯಾವುದೇ ಗೊಂದಲಗಳಿಗೆ ಆಸ್ಪದ ನೀಡದಂತೆ ಸುಗಮವಾಗಿ ಮತದಾನ ಪ್ರಕ್ರಿಯೆಗಳು ನಡೆಯುವಂತೆ ನೋಡಿಕೊಳ್ಳಬೇಕು ಎಂದರು.
ಮತದಾನದ ದಿನದಂದು ತಮಗೆ ನಿಗಧಿಪಡಿಸಿದ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮತಗಟ್ಟೆ ಅಧಿಕಾರಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಮತಗಟ್ಟೆಯಲ್ಲಿ ಕಂಡು ಬರುವ ಯಾವುದೇ ಬಗೆಯ ಸಮಸ್ಯೆಗಳ ಬಗ್ಗೆ ತಕ್ಷಣವೇ ಸ್ಪಂದಿಸಿ, ಈ ಬಗ್ಗೆ ಅಗತ್ಯ ಕ್ರಮ ಕೈಗೊಂಡು, ಸುಗಮ ಮತದಾನಕ್ಕೆ ವ್ಯವಸ್ಥೆ ಮಾಡುವಂತೆ ತಿಳಿಸಿದರು.
ಬಹುತೇಕ ಎಲ್ಲಾ ಸೆಕ್ಟರ್ ಅಧಿಕಾರಿಗಳು ಈಗಾಗಲೇ ಹಲವು ಚುನಾವಣಾ ಕರ್ತವ್ಯದಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದು, ತಮ್ಮ ಅನುಭವವನ್ನು ಬಳಸಿಕೊಂಡು ಪ್ರಸಕ್ತ ಲೋಕಸಭಾ ಚುನಾವಣೆಯನ್ನು ಅತ್ಯಂತ ಯಶಸ್ವಿಯಾಗಿ ನಡೆಯುವಂತೆ ಕರ್ತವ್ಯ ನಿರ್ವಹಿಸುವುದರ ಮೂಲಕ ಚುನಾವಣಾ ಯಶಸ್ಸಿಗೆ ಸಹಕಾರ ನೀಡಬೇಕು ಎಂದರು.
ತರಬೇತಿಯಲ್ಲಿ ಸೆಕ್ಟರ್ ಅಧಿಕಾರಿಗಳ ಕರ್ತವ್ಯಗಳ ಬಗ್ಗೆ ಹಾಗೂ ಇ.ವಿ.ಎಂ ಮತ್ತು ವಿವಿ ಪ್ಯಾಟ್ ಗಳನ್ನು ಬಳಸುವ ಬಗ್ಗೆ ಹಾಗೂ ಅವುಗಳ ಕಾರ್ಯ ನಿರ್ವಹಣೆ ಬಗ್ಗೆ ಪ್ರಾಯೋಗಿಕವಾಗಿ ತರಬೇತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪುತ್, ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ, ಹಳಿಯಾಳದ ಸಹಾಯಕ ಚುನಾವಣಾಧಿಕಾರಿ ಸ್ಟೆಲ್ಲಾ ವರ್ಗಿಸ್, ಜಿಲ್ಲಾ ಮಾಸ್ಟರ್ ಟ್ರೈನರ್ ಗಳು ಮತ್ತು ಜಿಲ್ಲೆಯ ಎಲ್ಲಾ ಸೆಕ್ಟರ್ ಅಧಿಕಾರಿಗಳು ಉಪಸ್ಥಿತರಿದ್ದರು.
……

Latest Indian news

Popular Stories