ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪಿಯು ಶಿಕ್ಷಣ: ರಾಕೇಶ ರಾಜಲಬಂಡಿ

ರಾಯಚೂರು: ವೇದಾಂತ ಶಿಕ್ಷಣ ಸಂಸ್ಥೆಯ ವತಿಯಿಂದ ನಗರದ ಪೂರ್ಣಿಮಾ ಪಿ.ಯು ಕಾಲೇಜಿನಲ್ಲಿ ಪ್ರಸಕ್ತ ಸಾಲಿನಲ್ಲಿ ಪಿಯುಸಿ ಪ್ರಥಮ ಹಾಗೂ ದ್ವಿತೀಯ ವರ್ಷದ ಕಲಾ ವಿಭಾಗದಲ್ಲಿ ತಲಾ 100 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ನಿರ್ಧರಿಸಲಾಗಿದೆ ಎಂದು ವೇದಾಂತ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರಾಕೇಶ ರಾಜಲಬಂಡಿ ತಿಳಿಸಿದರು.

ವೇದಾಂತ ಶಿಕ್ಷಣ ಸಂಸ್ಥೆ 10 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಮುಂದಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮನವಿ ಮಾಡಿದರು.

2014ರಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುವ ನಿಟ್ಟಿನಲ್ಲಿ ವೆಂಕಟೇಶ್ವರ ಎಜುಕೇಶನ್ ಟ್ರಸ್ಟ್ ನಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೇನೆ. ರಾಯಚೂರಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ, ಕಲಿಕೆಗೆ ಪ್ರೋತ್ಸಾಹ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಚಲನವಲನ, ಗ್ರಹಿಸುವ ಸಾಮರ್ಥ್ಯ ಹಾಗೂ ಅನೇಕ ಸೂತ್ರಗಳ ಆಧಾರದ ಮೇಲೆ ಮಕ್ಕಳಿಗೆ ಶಿಕ್ಷಣ ನೀಡಲಾಗಿದೆ. ಆ ಮೂಲಕ ಅನೇಕ ವಿದ್ಯಾರ್ಥಿಗಳು ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆಯಲು ಸಾಧ್ಯವಾಗಿದೆ ಎಂದು ಹೇಳಿದರು.

2021ರಲ್ಲಿ ವೇದಾಂತ ಶಿಕ್ಷಣ ಸಂಸ್ಥೆ ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉದ್ಯೋಗ ಪಡೆಯಲು ಕೌಶಲ್ಯ ಆಧಾರಿತ ಶಿಕ್ಷಣ ನೀಡುವ ಆಲೋಚನೆ ಹೊಂದಿದೆ. ಪೂರ್ಣಿಮಾ ಪದವಿ ಪೂರ್ವ ಕಾಲೇಜಿನ ಆಡಳಿತ ಅಧಿಕಾರಿಯಾಗಿ ಪಿಯುಸಿ ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗ, ವೇದಾಂತ ಶಿಕ್ಷಣ ಸಂಸ್ಥೆಯಲ್ಲಿ ಬಿಎಸ್ ಸಿ, ಬಿಸಿಎ, ಬಿ.ಎ, ಬಿ.ಕಾಂ ಪದವಿ ಪ್ರವೇಶ ನೀಡಿ ಸಂಸ್ಥೆಯನ್ನು ಬೆಳೆಸಲಾಗುತ್ತಿದೆ ಎಂದರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕಲಾ ವಿಭಾಗದಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತಿದೆ ಎಂದು ಹೇಳಿದರು.

ಈ ವೇಳೆ ಕಲಾ ವಿಭಾಗದ ಮುಖ್ಯಸ್ಥ ಶಿವಪ್ಪ, ಜಿ.ವೀರಪ್ಪ, ನಿರ್ಮಲಾ ದೇವಿ, ಪ್ರಾಣೇಶ ಇದ್ದರು.

Latest Indian news

Popular Stories