ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಧ್ಯಾಹ್ನದ ಊಟದ ಬಳಿಕ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಊಟ ಮಾಡಿದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದ್ದು, 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿಗಳನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಸುಮಾರು 250ಕ್ಕೂ ಹೆಚ್ಚು ಮಕ್ಕಳಿರುವ ಮೊರಾರ್ಜಿ ವಸತಿ ಶಾಲೆಯಲ್ಲಿ ಮಧ್ಯಾಹ್ನ ಚಪಾತಿ ಮತ್ತು ಅನ್ನ ಸಾಂಬರು ಊಟದ ಬಳಿಕ ವಿದ್ಯಾರ್ಥಿಗಳಲ್ಲಿ ವಾಂತಿ ಬೇಧಿ ಶುರುವಾಗಿದೆ. ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗೂ ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.
ಘಟನೆಗೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಧಿಕಾರಿಗಳು ದೌಡಾಯಿಸಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಗಮನವಹಿಸಿದ್ಧಾರೆ.