ವಿಂಡೀಸ್ ವಿರುದ್ಧ ಟಿ20 ಸರಣಿಗೆ ತಂಡ ಪ್ರಕಟ: ರೋಹಿತ್, ಕೊಹ್ಲಿಗೆ ವಿಶ್ರಾಂತಿ, ಸೂರ್ಯ ಕುಮಾರ್ ಯಾದವ್ ಟೀಂ ಇಂಡಿಯಾ ಉಪನಾಯಕ

ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಗೆ ಟೂರ್ನಿಯಿಂದ ವಿಶ್ರಾಂತಿ ನೀಡಲಾಗಿದೆ. ಎಂದಿನಂತೆ ಟಿ20 ತಂಡವನ್ನು  ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದು, ಸೂರ್ಯಕುಮಾರ್ ಯಾದವ್​ಗೆ ಉಪನಾಯಕನ ಸ್ಥಾನ ನೀಡಲಾಗಿದೆ.

ಹಾಗೆಯೇ ಇದೇ ಮೊದಲ ಬಾರಿಗೆ ತಿಲಕ್ ವರ್ಮಾ, ಯಶಸ್ವಿ ಜೈಸ್ವಾಲ್ ಭಾರತ ಟಿ20 ತಂಡದಲ್ಲಿ  ಸ್ಥಾನ ಪಡೆದಿದ್ದು, ಈ ಬಾರಿಯ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ತಿಲಕ್ ವರ್ಮಾ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ಪರ ಯಶಸ್ವಿ ಜೈಸ್ವಾಲ್ ಅಬ್ಬರಿಸಿದ್ದರು. ಇದೀಗ ಈ ಇಬ್ಬರು ಎಡಗೈ ದಾಂಡಿಗರು ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ಸಂಜು ಸ್ಯಾಮ್ಸನ್ ವಿಕೆಟ್ ಕೀಪರ್ ಸ್ಥಾನದಲ್ಲಿ ತಂಡಕ್ಕೆ ಕಂಬ್ಯಾಕ್ ಮಾಡಿದ್ದಾರೆ.

ಮತ್ತೊಂದೆಡೆ ಈ ಸರಣಿಗೆ ಪ್ರಮುಖ ವೇಗಿ ಮೊಹಮ್ಮದ್ ಸಿರಾಜ್ ಹಾಗೂ ಮೊಹಮ್ಮದ್ ಶಮಿ ಆಯ್ಕೆಯಾಗಿಲ್ಲ. ಹಾಗೆಯೇ ಗಾಯದ ಕಾರಣ ಜಸ್​ಪ್ರೀತ್ ಬುಮ್ರಾ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಬದಲಾಗಿ ವೇಗಿಗಳಾಗಿ ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್, ಅವೇಶ್ ಖಾನ್ ಹಾಗೂ ಮುಖೇಶ್ ಕುಮಾರ್ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಅಲ್ಲದೆ ಸ್ಪಿನ್ನರ್​ಗಳಾಗಿ ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಾಹಲ್ ಹಾಗೂ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ.

ಭಾರತ ಟಿ20 ತಂಡ: 
ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

Latest Indian news

Popular Stories