ಆಂಗ್ಲರು ಆಲೌಟ್: ಟೀಮ್ ಇಂಡಿಯಾಗೆ ಭರ್ಜರಿ ಜಯ

ವಿಶಾಖಪಟ್ಟಣಂನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡದ ಪರ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಬಿರುಸಿನ ಬ್ಯಾಟಿಂಗ್​ನೊಂದಿಗೆ ಇಂಗ್ಲೆಂಡ್ ಬೌಲರ್​ಗಳ ಬೆಂಡೆತ್ತಿದ ಯಶಸ್ವಿ ಜೈಸ್ವಾಲ್ 290 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 19 ಫೋರ್​ಗಳೊಂದಿಗೆ 209 ರನ್ ಬಾರಿಸಿದ್ದರು. ಈ ಭರ್ಜರಿ ದ್ವಿಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 396 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಯಾರ್ಕರ್ ಸ್ಪೆಷಲಿಸ್ಟ್ ಜಸ್​ಪ್ರೀತ್ ಬುಮ್ರಾ ಅವರ ಮಾರಕ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಕೇವಲ 253 ರನ್​ಗಳಿಗೆ ಆಲೌಟ್ ಆಯಿತು. ಭಾರತದ ಪರ ಬುಮ್ರಾ 45 ರನ್ ನೀಡಿ 6 ವಿಕೆಟ್ ಕಬಳಿಸಿ ಮಿಂಚಿದರು.

ದ್ವಿತೀಯ ಇನಿಂಗ್ಸ್​:
ಮೊದಲ ಇನಿಂಗ್ಸ್​​ನಲ್ಲಿನ 143 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಶುಭ್​ಮನ್ ಗಿಲ್ (104) ಭರ್ಜರಿ ಶತಕ ಬಾರಿಸಿ ಮಿಂಚಿದರು. ಈ ಶತಕದ ಹೊರತಾಗಿಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 255 ರನ್​ಗಳಿಗೆ ಆಲೌಟ್ ಆಯಿತು.

ಮೊದಲ ಇನಿಂಗ್ಸ್​ನಲ್ಲಿ 143 ರನ್​ಗಳ ಹಿನ್ನಡೆ ಹೊಂದಿದ್ದ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಒಟ್ಟು 399 ರನ್​ಗಳ ಟಾರ್ಗೆಟ್ ಪಡೆಯಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡಕ್ಕೆ ಝಾಕ್ ಕ್ರಾಲಿ (73) ಉತ್ತಮ ಆರಂಭ ಒದಗಿಸಿದ್ದರು. ಆದರೆ 4ನೇ ದಿನದಾಟದ ಮೊದಲ ಸೆಷನ್​ನಲ್ಲೇ 5 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಮಧ್ಯಮ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯದೊಂದಿಗೆ ಸಂಕಷ್ಟಕ್ಕೆ ಸಿಲುಕಿದ ಇಂಗ್ಲೆಂಡ್ ವಿರುದ್ಧ ಭಾರತೀಯ ಬೌಲರ್​ಗಳು ಪರಾಕ್ರಮ ಮೆರೆದರು.

ಪರಿಣಾಮ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 292 ರನ್​ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಟೀಮ್ ಇಂಡಿಯಾ ದ್ವಿತೀಯ ಟೆಸ್ಟ್ ಪಂದ್ಯವನ್ನು 106 ರನ್​ಗಳಿಂದ ಗೆದ್ದುಕೊಂಡಿದೆ.

ಈ ಗೆಲುವಿನೊಂದಿಗೆ 5 ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು 1-1 ಅಂತರದಿಂದ ಸಮಬಲ ಸಾಧಿಸಿದೆ. ಇದಕ್ಕೂ ಮುನ್ನ ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಜಯ ಸಾಧಿಸಿತ್ತು. ಇದೀಗ ವಿಶಾಖಪಟ್ಟಣಂನಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ.

Latest Indian news

Popular Stories