ಶಾಸಕ ಯತ್ನಾಳರಿಗೆ ವಿಜಯಪುರ ನಗರ ಬಿಟ್ಟು ಬೇರೆ ಕ್ಷೇತ್ರದ ಟಿಕೇಟ್ ನೀಡಲು ಒತ್ತಾಯ

ವಿಜಯಪುರ : ಬಿಜೆಪಿಯ ಪೈರ್ ಬ್ರ್ಯಾಂಡ್ ಎಂದು ಗುರುತಿಸಿಕೊಂಡಿರುವ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಮ್ಮ ಹಿರಿಯ ನಾಯಕರು. ಅವರಿಗೆ ರಾಜ್ಯದ ಯಾವುದೇ ಮೂಲೆಯಲ್ಲಿ ನಿಲ್ಲಿಸಿದರೂ ಗೆದ್ದು ಬರುವ ಶಕ್ತಿ ಇದೆ. ಹಾಗಾಗಿ ಬಿಜೆಪಿ ಹೈಕಮಾಂಡ ಯತ್ನಾಳ ಅವರಿಗೆ ಜಿಲ್ಲೆಯ ಬೇರೆ ಮತಕ್ಷೇತ್ರದಲ್ಲಿ ಟಿಕೆಟ್ ನೀಡಿ ವಿಜಯಪುರ ನಗರ ಮತಕ್ಷೇತ್ರದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ನೀಡಬೇಕು ಎಂದು ಮಹಾನಗರ ಪಾಲಿಕೆ ಮಾಜಿ ಉಪಮೇಯರ್ ಗೋಪಾಲ ಘಟಕಾಂಬಳೆ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರ ಬದಲಾಗಿ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿತ್ತು. ಇದರಿಂದ ನಗರ ಮತಕ್ಷೇತ್ರದಲ್ಲಿ ಅತೀ ಹೆಚ್ಚಿನ ಪ್ರಮಾಣ ಇರುವ ಬಣಜಿಗ ಸಮುದಾಯಕ್ಕೆ ಅನ್ಯಾಯವಾಗಿತ್ತು. ಅಪ್ಪಾಸಾಹೇಬ ಪಟ್ಟಣಶೆಟ್ಟಿ ಹಾಗೂ ಬಣಜಿಗ ಸಮುದಾಯಕ್ಕೆ ನ್ಯಾಯ ಸಿಗಬೇಕಾದರೆ ಈ ಬಾರಿ ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠವಾಗಿ ಕಟ್ಟಬೇಕಿದೆ. ಆ ನಿಟ್ಟಿನಲ್ಲಿ ಯತ್ನಾಳ ಅವರಿಗೆ ಜಿಲ್ಲೆ ಬೇರೆ ಮತಕ್ಷೇತ್ರದಲ್ಲಿ ಟಿಕೆಟ್ ನೀಡಿದರೆ ನಾವು ಹೆಚ್ಚಿನ ಶಾಸಕ ಸ್ಥಾನಗಳನ್ನು ಗೆದ್ದುಕೊಳ್ಳಲು ಸಹಾಯವಾಗುತ್ತದೆ. ಈ ಹಿಂದೆ ಪಟ್ಟಣಶೆಟ್ಟಿ ಅವರು ಸಹಿತ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಎಲ್ಲ ಜಾತಿ, ಸಮುದಾಯಗಳೊಂದಿಗೆ ಆತ್ಮೀಯತೆ ಇಟ್ಟುಕೊಂಡಿದ್ದಾರೆ. ಅದರಲ್ಲೂ ಬಿಜೆಪಿ ತಳಮಟ್ಟದ ಕಾರ್ಯಕರ್ತರನ್ನು ಬೆಳೆಸಿದ್ದಾರೆ. ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರಿಗೆ ಬೆಂಬಲವಾಗಿ ನಿಂತು ಪಕ್ಷ ಕಟ್ಟಿ ಬೆಳೆಸಲು ಶ್ರಮಿಸಿದ್ದಾರೆ. ಹಾಗಾಗಿ ವಿಜಯಪುರ ನಗರ ಮತಕ್ಷೇತ್ರದ ಟಿಕೆಟ್ ಅನ್ನು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರಿಗೆ ನೀಡಬೇಕು ಎಂದು ಬಿಜೆಪಿ ಹೈಕಮಾಂಡಗೆ ಮನವಿ ಮಾಡಿಕೊಳ್ಳುತ್ತೇನೆ ಎಂದರು.

ವಿಡಿಎ ಮಾಜಿ ಅಧ್ಯಕ್ಷ ಭೀಮಾಶಂಕರ ಹದ್ನೂರ ಮಾತನಾಡಿ, ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರಿಗೆ ನಗರ ಮತಕ್ಷೇತ್ರದಲ್ಲಿ ಹೆಚ್ಚಿನ ಜನ ಬೆಂಬಲ ಇದೆ. ಬಣಜಿಗ ಸಮುದಾಯ ಅಧಿಕವಾಗಿದ್ದು, ಇಲ್ಲಿ ಬಿಜೆಪಿ ಸುಲಭವಾಗಿ ಗೆಲ್ಲಲಿದೆ. ಇತರೆ ಮತಕ್ಷೇತ್ರದಲ್ಲಿ ಪಂಚಮಸಾಲಿಗಳು ಹೆಚ್ಚು ಪ್ರಬಲರಿದ್ದಾರೆ. ಆ ಮತಕ್ಷೇತ್ರದಲ್ಲಿ ಯತ್ನಾಳ ಅವರಿಗೆ ಟಿಕೆಟ್ ನೀಡಿದಲ್ಲಿ ಬಿಜೆಪಿಗೆ ಹೆಚ್ಚಿನ ಅನುಕೂಲವಾಗಲಿದೆ. ಯತ್ನಾಳ ಅವರು ಈ ಹಿಂದೆ ಸಂಸದರಾಗಿ ಇಡೀ ಜಿಲ್ಲೆಗೆ ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಅವರು ನಮ್ಮ ನಾಯಕರು. ನಗರ ಮತಕೇತ್ರದಲ್ಲಿ ಪಟ್ಟಣಶೆಟ್ಟಿ ಅವರಿಗೆ ಟಿಕೆಟ್ ನೀಡಿದಲ್ಲಿ ಬಿಜೆಪಿ ಕಾರ್ಯಕರ್ತರು ಅತೀ ಹುಮ್ಮಸ್ಸಿನಿಂದ ಕೆಲಸ ಮಾಡುತ್ತೇವೆ. ಅಲ್ಲದೇ ಜಿಲ್ಲೆಯಿಂದ ಅತೀ ಹೆಚ್ಚು ಬಿಜೆಪಿ ಶಾಸಕರನ್ನು ಗೆಲ್ಲಿಸಿ ಕಳುಹಿಸುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದರು.

ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವಧಿಯಲ್ಲಿ ನಗರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಆಗಿವೆ. ಲೀಜ್ ಆಸ್ತಿ, ಯುಜಿಡಿ ಕಾಮಗಾರಿಗಳು ಸೇರಿದಂತೆ ಅನೇಕ ಮಹತ್ತರ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿಯೇ ಮೊದಲ ಬಾರಿಗೆ ಲೀಜ್ ಆಸ್ತಿ ಬಗ್ಗೆ ಕೆಲಸ ಮಾಡಿದವರು ಯಾರಾದರೂ ಇದ್ದರೆ, ಅದು ಅಪ್ಪಾಸಾಹೇಬ ಪಟ್ಟಣಶೆಟ್ಟಿ. ಅಭಿವೃದ್ಧಿ ಚಿಂತಕ, ಸಣ್ಣ ಕಾರ್ಯಕರ್ತರನ್ನು ಬೆಳೆಸುವ ನಾಯಕ, ಪಕ್ಷದ ಶಿಸ್ತು ಪಾಲಿಸುತ್ತಾ ಎಲ್ಲ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ನಾಯಕನಾಗಿರು ಅಪ್ಪಾಸಾಹೇಬ ಪಟ್ಟಣಶೆಟ್ಟಿ ಅವರಿಗೆ ವಿಜಯಪುರ ನಗರದ ಮತಕ್ಷೇತ್ರದ ಬಿಜೆಪಿ ಟಿಕೆಟ್ ನೀಡಬೇಕು ಎಂದು ಹೈಕಮಾಂಡ್ಗೆ ಒತ್ತಾಯಿಸುತ್ತನೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡರಾದ ಶಿವಾನಂದ ಮಾನಕರ, ಮಹಾನಗರ ಪಾಲಿಕೆ ಮಾಜಿ ಸದಸ್ಯ ಪ್ರಕಾಶ ಮಿರ್ಜಿ, ಅಪ್ಪು ಸಜ್ಜನ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಾಂತು ಶಿಂಧೆ ಉಪಸ್ಥಿತರಿದ್ದರು.

Latest Indian news

Popular Stories