ಕಾರವಾರ : ಕೇಂದ್ರದ ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದವರ ವಿರುದ್ಧ ಐಟಿ, ಇಡಿ ಸಿಬಿಐ ದಾಳಿ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಜ್ಯದ ಉಪ ಮುಖ್ಯಮಂತ್ರಿ “ಇದು ಚುನಾವಣೆ ಸಮಯ. ಪ್ರಕೃತಿ ನಿಯಮ ಹಾಗೂ ಸಮಯ ಎಲ್ಲದಕ್ಕೂ ಉತ್ತರ ನೀಡಲಿದೆ” ಎಂದರು. ಕೇಜ್ರಿವಾಲ್ ಪ್ರಕರಣ ಸೇರಿದಂತೆ ಏನೆಲ್ಲಾ ನಡೆಯುತ್ತಿದೆ ಎಂದು ಜನ ನೋಡುತ್ತಿದ್ದು, ಅವರೇ ಉತ್ತರ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.
ಗೋಕರ್ಣ ಮಹಾಬಲೇಶ್ವರ ದೇಗುಲದಲ್ಲಿ ಬುಧವಾರ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ಬಿಜೆಪಿ ಪಕ್ಷಕ್ಕೆ ಅಡಿಪಾಯ ಹಾಕಿದವರನ್ನು ಮನೆಯಲ್ಲಿ ಕೂರಿಸಿ, ಹೊಸಮುಖಗಳನ್ನು ಕಣಕ್ಕೆ ಇಳಿಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.
ಬಿಜೆಪಿ ಜೆಡಿಎಸ್ ಮೈತ್ರಿಯಾಗಿ ಹೊಸಬರನ್ನು ಕಣಕ್ಕಿಳಿಸಿ ಪ್ರಯೋಗ ಮಾಡುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ
ದಳದವರು ಆರಂಭದಲ್ಲೇ ಎಡವಿದ್ದಾರೆ. ಆ ಪಕ್ಷದಲ್ಲಿ ಜಾತ್ಯಾತೀತ ತತ್ವ ಇಲ್ಲವಾಗಿದೆ. ಅಲ್ಲಿ ಪಕ್ಷದ ವಿಚಾರವೇ ಇಲ್ಲ. ಅವರ ಕುಟಂಬದ ಸದಸ್ಯರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸಿದ ಮೇಲೆ ಜೆಡಿಎಸ್ ಇದೆ ಎಂದು ಹೇಳಲು ಸಾಧ್ಯವೇ? , ಇನ್ನು ಬಿಜೆಪಿಯಲ್ಲಿ ಏನೆಲ್ಲಾ ನಡೆಯುತ್ತಿದೆ ಎಂದು ನಾನು ಹೇಳುವ ಅಗತ್ಯವಿಲ್ಲ. ಅಲ್ಲಿ ಪಕ್ಷದ ಮಾಜಿ ಅಧ್ಯಕ್ಷರು, ಮಾಜಿ ಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳಿಗೆ ಟಿಕೆಟ್ ಇಲ್ಲವಾಗಿದೆ. ಪಕ್ಷಕ್ಕೆ ಭದ್ರ ಬುನಾದಿ ಹಾಕಿದವರಿಗೆ, ರಾಜ್ಯ ಪ್ರವಾಸ ಮಾಡಿದವರಿಗೆ, ನಮ್ಮ ವಿರುದ್ಧ ಹೋರಾಟ ಮಾಡಿದವರನ್ನು ಮನೆಗೆ ಕಳಿಸಿ ಹೊಸಬರನ್ನು ಕಣಕ್ಕಿಳಿಸಿದ್ದಾರೆ ಎಂದರು.
ದೇವಾಲಯದ ಅರ್ಚಕರು ತಾವು ಸಿಎಂ ಆಗಬೇಕು ಎಂದು ಪೂಜೆ ಮಾಡಿದ್ದಾರೆ ಎಂದು ಕೇಳಿದಾಗ, “ಅರ್ಚಕರು ಕೇಳುವುದರಲ್ಲಿ ತಪ್ಪೇನಿದೆ. ಅವರ ಆಸೆ ಅವರು ಕೇಳಿದ್ದಾರೆ. ಈಗ ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇದ್ದಾರೆ. ಅವರ ಕೆಳಗೆ ಉಪಮುಖ್ಯಮಂತ್ರಿಯಾಗಿ, ಪಕ್ಷದ ಅಧ್ಯಕ್ಷನಾಗಿ ಕೆಲಸ ಮಾಡುತ್ತಿದ್ದೇನೆ. ಯಾರು ಏನೇ ಆಸೆ ಪಟ್ಟರು ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿದೆ. ಈಗ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ನಾವು ಕೆಲಸ ಮಾಡುತ್ತಿದ್ದು, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಿ ರಾಜ್ಯ ಪ್ರಗತಿ ಸಾಧಿಸಲಿ ಎಂಬುದು ನಮ್ಮ ಆಸೆ. ನಮ್ಮ ಅಭಿಮಾನಿಗಳು ಕೇಳಿದಾಗ ಅವರ ಬಾಯಿ ಮುಚ್ಚಿಸಲು ಆಗುವುದಿಲ್ಲ” ಎಂದು ತಿಳಿಸಿದರು.
ಇಲ್ಲಿ ಪಕ್ಷ ಸಂಘಟನೆಗೆ ಕಾರ್ಯಕರ್ತರಿಗೆ ಏನು ಸೂಚನೆ ನೀಡಿದ್ದೀರಿ ಎಂದು ಕೇಳಿದಾಗ, “ಇಲ್ಲಿ ಹಿಂದುತ್ವ ಹಾಗೂ ರಾಮ ಮಂದಿರ, ಬಿಜೆಪಿ ಅಲೆ ಇಲ್ಲ. ಹೀಗಾಗಿ ಬಿಜೆಪಿ ಗ್ಯಾರಂಟಿ ಎಂದು ಹೇಳುವ ಬದಲು ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ” ಎಂದರು.
ಬಿಜೆಪಿ ಹಿಂದುತ್ವ ಪ್ರತಿಪಾದಕರಿಗೆ ಟಿಕೆಟ್ ನೀಡದೇ ಎಲ್ಲರನ್ನು ಸಮಾನವಾಗಿ ನೋಡುವ ಸಂದೇಶ ಸಾರುತ್ತಿದ್ದಾರಾ ಎಂದು ಕೇಳಿದಾಗ, “ಅವರ ಸಂದೇಶ ಏನೂ ಇಲ್ಲ, ಸಮಾನತೆಯೂ ಇಲ್ಲ. ಹೋರಾಟ ಮಾಡಿದವರಿಗೆ ವಿಶ್ರಾಂತಿ ಪಡೆಯಿರಿ ಎಂದು ಮನೆಯಲ್ಲಿ ಕೂರಿಸಿದ್ದಾರೆ” ಎಂದು ತಿಳಿಸಿದರು.
ಶಿವರಾಮ್ ಹೆಬ್ಬಾರ್ ಅವರು ಕಾಂಗ್ರೆಸ್ ಸೇರ್ಪಡೆಗೆ ವಿರೋಧವಿದೆ ಎಂಬ ಪ್ರಶ್ನೆಗೆ, “ನಮ್ಮ ಪಕ್ಷದ ನಾಯಕತ್ವ, ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಸ್ವಾಗತಿಸುತ್ತೇವೆ. ಯಾರನ್ನೂ ವಿರೋಧ ಮಾಡುವ ಪ್ರಶ್ನೆ ಇಲ್ಲ. ಪಕ್ಷ ತೀರ್ಮಾನದ ವಿರುದ್ಧ ಆಂತರಿಕವಾಗಿ ಹಾಗೂ ಬಹಿರಂಗವಾಗಿ ವಿರೋಧಿಸುವಂತಿಲ್ಲ”ಎಂದು ತಿಳಿಸಿದರು.
“ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಳೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ನಮ್ಮ ಚುನಾವಣಾ ಪ್ರಚಾರ ಕೂಡ ಆರಂಭಿಸುತ್ತಿದ್ದೇವೆ. ಹೀಗಾಗಿ ನಿನ್ನೆ ಧರ್ಮಸ್ಥಳ, ಶೃಂಗೇರಿ, ಕುಕ್ಕೆ ಸುಬ್ರಮಣ್ಯ, ಕೊಲ್ಲೂರು ಮೂಕಾಂಬಿಕೆ, ಇಡುಗುಂಜಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದೆ
ಎಂದರು.
…..