ಉಡುಪಿ: ಕರಾವಳಿ, ಗುಡ್ಡಗಾಡು ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು ಜೂ.30ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜೂನ್ 30, ಗುರುವಾರದವರೆಗೆ ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಸಂಜೆ ವೇಳೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಈ ಪ್ರದೇಶದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗಳವಾರವೂ ಇದೇ ಎಚ್ಚರಿಕೆ ನೀಡಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಮತ್ತು ಹುಬ್ಬಳ್ಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.