ಉಡುಪಿ: ಜಿಲ್ಲೆಯಲ್ಲಿ 46 ಮಂಗನ ಕಾಯಿಲೆ ಪ್ರಕರಣಗಳು ಕಂಡುಬಂದಿದ್ದು, ಒಬ್ಬರು ಮರಣ ಹೊಂದಿರುವ ಬಗ್ಗೆ ವರದಿಯಾಗಿರುತ್ತದೆ ಎಂದ ಅವರು, ಅರಣ್ಯ ಪ್ರದೇಶಗಳಿಗೆ ಪ್ರವಾಸಿಗರು ಆಗಮಿಸಿದಾಗ ಅವರಿಗೂ ಸಹ ಈ ರೋಗದ ಬಗ್ಗೆ ಎಚ್ಚರಿಕೆ ತೆಗೆದುಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಕ್ಯಾಸನೂರು ಫಾರೆಸ್ಟ್ ಡಿಸೀಸ್ ಎಂಬುದು ಮಂಗಗಳು ಸಾವನ್ನಪ್ಪಿ ಅವುಗಳಿಂದ ಉಂಟಾಗುವ ಉಣ್ಣೆಗಳು ಕಚ್ಚುವಿಕೆಯಿಂದ ಈ ಮಂಗನ ಕಾಯಿಲೆಗಳು ಹರಡುತ್ತವೆ. ಕಾಡಿನಲ್ಲಿ ಮಂಗಗಳು ಸತ್ತಾಗ ಅವುಗಳನ್ನು ಸರಕಾರದ ಮಾರ್ಗಸೂಚಿ ಅನ್ವಯ ವಿಲೇವಾರಿ ಮಾಡಬೇಕು ಎಂದ ಅವರು, ಆ ರೀತಿಯ ಮಂಗಗಳು ಸತ್ತ 5 ಕಿ.ಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಕಾಡು ಹಾಗೂ ಕಾಡಂಚಿನಲ್ಲಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಶು ಪಾಲನಾ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಸಮಿತಿಗಳನ್ನು ರಚಿಸಿ, ಈ ಕಾಯಿಲೆ ಬಗ್ಗೆ ಮೇಲ್ವಿಚಾರಣೆ ನಡೆಸಬೇಕು ಎಂದರು.
ಮಾರ್ಚ್ 3 ರಂದು ಜಿಲ್ಲೆಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆಯ್ನು ನೀಡಲಾಗುತ್ತಿದ್ದು, ಜಿಲ್ಲೆಯ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆಯ್ನು ಹಾಕಿಸಲು ಮುಂದಾಗಬೇಕು ಎಂದರು
ಈಗಾಗಲೇ ನಮ್ಮ ದೇಶದಲ್ಲಿ ಪಲ್ಸ್ ಪೊಲಿಯೋ ಪ್ರಕರಣಗಳು ಶೂನ್ಯವಿದ್ದರೂ ಸಹ, ಯಾವುದೇ ಮಕ್ಕಳಿಗೆ ಬರಬಾರದು ಎಂಬ ಉದ್ದೇಶದಿಂದ ಪೊಲಿಯೋ ಲಸಿಕೆಯನ್ನು ನೀಡಲಾಗುತ್ತಿದೆ. ಪ್ರತಿಯೊಬ್ಬ ಮಕ್ಕಳಿಗೂ ಪೊಲೀಯೋ ಲಸಿಕೆ ಹನಿಯನ್ನು ಹಾಕಿಸಿ, ಪ್ರತಿಶತಃ ನೂರರಷ್ಟು ಸಾಧಿಸಲು ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುವುದರೊಂದಿಗೆ ಲಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಲಸಿಕೆ ನೀಡುತ್ತಿರುವ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಪ್ರಚಾರ ನೀಡಬೇಕು. ಇತರೆ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಜಿಲ್ಲೆಯಲ್ಲಿ ಯಾವುದೇ ಒಂದು ಮಕ್ಕಳು ಪಲ್ಸ್ ಪೊಲೀಯೋ ಲಸಿಕೆ ಹಾಕಿಸಿಕೊಳ್ಳುವುದರಿಂದ ಹೊರಗೆ ಉಳಿಯದಂತೆ ನೋಡಿಕೊಳ್ಳಬೇಕು ಎಂದರು. ಯಾವುದೇ ರೋಗ ಬಂದು ಚಿಕಿತ್ಸೆ ನೀಡುವ ಬದಲಾಗಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣಗಳಾದ ರೋಗ ಹರಡುವಿಕೆ, ಅವುಗಳ ಲಕ್ಷಣ, ತೆಗೆದುಕೊಳ್ಳಬೇಕಾದ ಚಿಕಿತ್ಸೆ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ರೋಗಗಳು ಹರಡದಂತೆ ಎಚ್ಚರಿಕೆ ವಹಿಸಲು ಕ್ರಮವಹಿಸಬೇಕೆಂದು ಸೂಚನೆ ನೀಡಿದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ಕಾರ್ಡ್‌ಗಳನ್ನು ಅರ್ಹ ಪ್ರತಿಯೊಬ್ಬ ಫಲಾನುಭವಿಗಳಿಗೂ ವಿತರಿಸಲಾಗುತ್ತಿದೆ. ಇದರಿಂದ ವಾರ್ಷಿಕ 5 ಲಕ್ಷ ರೂ. ವರೆಗೆ ಉಚಿತ ಆರೋಗ್ಯ ಸೇವೆಗಳನ್ನು ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಬಹುದಾಗಿದೆ. ಪ್ರತಿಯೊಬ್ಬರೂ ಆರೋಗ್ಯ ಕಾಡರ್ರ್ಗಳನ್ನು ಮಾಡಿಸಿಕೊಳ್ಳುವುದರೊಂದಿಗೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಎಂಡೋಸಲ್ಫಾನ್ ಪೀಡಿತರಿಗೆ ಉಚಿತ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ 1846 ಎಂಡೋಸಲ್ಫಾನ್ ಪೀಡಿತರಿದ್ದು, ಅವರಲ್ಲಿ 158 ಜನ ಮರಣ ಹೊಂದಿದ್ದು, 1649 ಜನರಿಗೆ ಪ್ರತೀ ತಿಂಗಳು ಮಾಸಾಶನವನ್ನು ನೀಡಲಾಗುತ್ತಿತ್ತು. ಕಳೆದೆರೆಡು ತಿಂಗಳಿನಿಂದ ಮಾಸಾಶನ ಸಿಗುತ್ತಿಲ್ಲ ಎಂಬ ಬಗ್ಗೆ ದೂರುಗಳೂ ಕೇಳೀ ಬರುತ್ತಿವೆ. ಕೆಲವರು ಇ-ಕೆವೈಸಿ ಮಾಡದೇ ಇದ್ದರೂ ಸಹ ಬರುವ ಸಾಧ್ಯತೆ ಕಡಿಮೆ ಇರುತ್ತದೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ, ಪ್ರತಿಯೊಬ್ಬರಿಗೂ ಮಾಸಾಶನ ದೊರೆಯುವಂತೆ ಕ್ರಮವಹಿಸಬೇಕೆಂದು ಸೂಚನೆ ನೀಡಿದರು.
ಎಂಡೋಸಲ್ಫಾನ್ ಬಾದಿತರಿಗೆ ಮನೆಯಲ್ಲಿಯೇ ಫಿಸಿಯೋಥೆರಪಿ ಆರೈಕೆ ನೀಡಲು ಪೋಷಕರುಗಳಿಗೆ ಕಾರ್ಯಾಗಾರಗಳನ್ನು ಆಯೋಜಿಸಬೇಕು ಎಂದ ಅವರು, ಅನಾಥ, ಎಂಡೋಸಲ್ಫಾನ್ ಬಾದಿತರಿಗೆ ಆರೈಕೆ ಮಾಡಲು ಹಾಗೂ ಹಗಲು ಯೋಗಕ್ಷೇಮಗಳನ್ನು ನೋಡಿಕೊಳ್ಳಲು ಬೈಂದೂರಿನ ಕಿರಿಮಂಜೇಶ್ವರ ಅಥವಾ ನಾಡ ಸುತ್ತಮುತ್ತಲಿನ ಪ್ರದೇಶದಲ್ಲಿ ಪಾಲನಾ ಕೇಂದ್ರವನ್ನು ತೆರೆಯಲು, ಮುಚ್ಚಿಹೋಗಿರುವ ಶಾಲಾ ಕಟ್ಟಡವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರತಿಯೊಬ್ಬ ನಾಗರಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡಲ್ಲಿ ಮಾತ್ರ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯ. ಸಾಮಾನ್ಯವಾಗಿ ಸೊಳ್ಳೆಗಳು ಸಂತಾನೋತ್ಪತ್ತಿಯನ್ನು ನಿಂತ ನೀರಿನಲ್ಲಿ ನಡೆಸಿ, ಸೊಳ್ಳೆಗಳ ತಾಣವಾಗಿ ಅವುಗಳು ಮಲೇರಿಯಾ, ಡೆಂಗ್ಯೂ, ಚಿಕನ್ ಗೂನ್ಯಾ ಗಳಂತಹ ರೋಗಗಳನ್ನು ಹರಡುತ್ತವೆ. ನೀರು ಎಲ್ಲೆಂದರಲ್ಲಿ ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಕುಷ್ಠರೋಗ ನಿಯಂತ್ರಣ ಅಧಿಕಾರಿ ಡಾ. ಲತಾ ನಾಯಕ್, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ. ಪ್ರಶಾಂತ್ ಭಟ್, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು