ನಾನು ಈ ಬಾರಿ ಪಾರ್ಲಿಮೆಂಟ್ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ : ಕುಯಿಲಾಡಿ

ಕಳೆದ 32 ವರ್ಷಗಳಿಂದ ನಿರಂತರವಾಗಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಬೂತ್ ಮಟ್ಟದಿಂದ ಜಿಲ್ಲಾಧ್ಯಕ್ಷ ಸ್ಥಾನದ ವರೆಗೆ ವಿವಿಧ ಹಂತಗಳಲ್ಲಿ ಕೆಲಸ ಮಾಡಿದ್ದೇನೆ. ನಾನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಎಂದು ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಪಕ್ಷದಲ್ಲಿ ಜವಾಬ್ದಾರಿಯುತವಾಗಿ ಕೆಲಸ ಮಾಡಿದ್ದರೂ, ಯಾವುದೇ ಹಂತದ ಚುನಾವಣೆಗಳಿಗೆ ಸ್ಪರ್ಧಿಸಲು ಅವಕಾಶ ದೊರೆತಿರುವುದಿಲ್ಲ. ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಪಕ್ಷದ ನಿಷ್ಠಾವಂತ ಕಾರ್ಯಕರ್ತನಾದ ನಾನು ಪಕ್ಷದ ಕಷ್ಟದ ಕಾಲದಲ್ಲೂ ಮತ್ತು ಎಲ್ಲಾ ಹಂತಗಳಲ್ಲೂ ಪಕ್ಷದೊಂದಿಗೆ ದೃಢವಾಗಿ ನಿಂತಿದ್ದೇನೆ. ನನಗೆ ಈ ಬಾರಿಯ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಬೇಕೆಂದು ಈಗಾಗಲೇ ಪಕ್ಷದ ವರಿಷ್ಠರಲ್ಲಿ ಆಗ್ರಹವನ್ನು ವ್ಯಕ್ತಪಡಿಸಿದ್ದೇನೆ.

ಕರಾವಳಿ ಹಿಂದುತ್ವದ ಭದ್ರಕೋಟೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಮತ್ತು ಕಾರ್ಯಕರ್ತರ ಅವಿರತ ಶ್ರಮದಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಬಿಜೆಪಿ ಐದೂ ಕ್ಷೇತ್ರಗಳನ್ನು ಭರ್ಜರಿಯಾಗಿ ಗೆಲ್ಲುವ ಮೂಲಕ ಉಡುಪಿ ಜಿಲ್ಲೆ ರಾಜ್ಯದಲ್ಲೇ ಅದ್ವಿತೀಯ ಸಾಧನೆ ಮಾಡಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories