ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಅರ್ಜಿ ಹರಿದಾಡುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಈವರೆಗೆ ಯಾವುದೇ ಅರ್ಜಿ ಫಾರ್ಮ್ ಗಳನ್ನು ಬಿಡುಗಡೆ ಮಾಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ನಕಲಿ ಅರ್ಜಿ ಗಳ ಮೂಲಕ ಕೆಲ ಕಿಡಿಗೇಡಿಗಳು ಸಾರ್ವಜನಿಕರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ನಕಲಿ ಅರ್ಜಿ ಹಾವಳಿ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಬೆಂಗಳೂರು ಓನ್, ಕರ್ನಾಟಕ ಒನ್, ಗ್ರಾಮ ಓನ್, ಬಾಪೂಜಿ ಸೇವಾ ಕೇಂದ್ರಗಳಲ್ಲಿ, ಪ್ರಜಾಪ್ರತಿನಿಧಿಗಳ ಬಳಿ ಮಾತ್ರ ನೋಂದಾಯಿಸಿಕೊಳ್ಳಬೇಕು ಎಂದು ಸಚಿವರು ತಿಳಿಸಿದರು.