ಉಡುಪಿ: ಮಹಾತ್ಮಾ ಗಾಂಧೀಜಿಯವರ ಸತ್ಯ, ಶಾಂತಿ, ಅಹಿಂಸಾ ತತ್ವಗಳು ಇಂದಿಗೂ ಪ್ರಸ್ತುತವಾಗಿದ್ದು, ಪ್ರತಿಯೊಬ್ಬರೂ ಅವುಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು, ಗಾಂಧೀಜಿಯವರಿಗೆ ಗೌರವ ಸಲ್ಲಿಸುವ ಮೂಲಕ ಗಾಂಧಿ ಜಯಂತಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸೋಣ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಹೇಳಿದರು.
ಅವರು ಇಂದು ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಗರಸಭೆ ಉಡುಪಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ & ಉಡುಪಿ ಜಿಲ್ಲಾ ಸಮಸ್ತ ಸಹಕಾರಿ ಇವರ ನೇತೃತ್ವದಲ್ಲಿ ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರ, ಲಿಯೋ ಡಿಸ್ಟ್ರಿಕ್ಟ್ 317 ಸಿ ಮತ್ತು ಕ್ರಿಶ್ಚಿಯನ್ ಪಿ.ಯು ಕಾಲೇಜು, ಲಯನ್ಸ್ ಕ್ಲಬ್ ಉಡುಪಿ ಇಂದ್ರಾಳಿ ಮತ್ತು ಲಯನ್ಸ್ ಕ್ಲಬ್ ಉಡುಪಿ ಚೇತನ ಹಾಗೂ ಲಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆದ ಜಿಲ್ಲಾ ಮಟ್ಟದ 155 ನೇ ಗಾಂಧಿ ಜಯಂತಿ ಕಾರ್ಯಕ್ರಮದ ಸಮಾರೋಪ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಚರಕದ ರಾಟೆಗೆ ನೂಲು ಹಾಕುವ ಮೂಲಕ ಚಾಲನೆ ನೀಡಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಪ್ರತಿಯೊಬ್ಬರೂ ಬಹಿರಂಗ ಸ್ವಚ್ಛತೆಯ ಜೊತೆಗೆ ಅಂತರಂಗದ ಸ್ವಚ್ಛತೆಯನ್ನು ಹೊಂದಿರಬೇಕು. ಗಾಂಧೀಜಿಯವರ ಆತ್ಮಚರಿತ್ರೆಯನ್ನು ಓದಿದಾಗ ಅವರು ವಿಶ್ವ ನಾಯಕನಾಗಿ ಬೆಳೆಯುವ ಹಂತವನ್ನು ಹಾಗೂ ಇತರರ ಲೇಖನಗಳಲ್ಲಿ ಅವರ ಬದುಕಿನ ಏಳು-ಬೀಳುಗಳನ್ನು ಸಂಕ್ಷಿಪ್ತವಾಗಿ ಗಮನಿಸಿದಾಗ ಒಬ್ಬ ಸಾಮಾನ್ಯ ವ್ಯಕ್ತಿ ಮಹಾತ್ಮರಾಗಿರುವುದನ್ನು ಕಾಣಬಹುದಾಗಿದೆ ಎಂದರು.
ಕೆಲಸಕ್ಕಾಗಿ ವಕೀಲ ವೃತ್ತಿಗೆ ದಕ್ಷಿಣ ಆಫ್ರಿಕಾಗೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಸ್ಥಳೀಯರಿಗೆ ಬ್ರಿಟಿಷರು ನೀಡುತ್ತಿದ್ದ ದಬ್ಬಾಳಿಕೆಯನ್ನು ಮನಗಂಡು ಹೋರಾಟಕ್ಕೆ ಇಳಿದ ಗಾಂಧೀಜಿ, ಬ್ರಿಟಿಷ್ ಅಧಿಕಾರಿಗಳು ಸಾಕಷ್ಟು ತೊಂದರೆ ನೀಡದರೂ ಸಹ ಅದನ್ನೆಲ್ಲಾ ಎದುರಿಸಿ ಹೋರಾಟ ಮಾಡಿ, ನಂತರ ಭಾರತಕ್ಕೆ ಬಂದು ಸ್ವಾತಂತ್ರ್ಯಕ್ಕಾಗಿ ಮುಂಚೂಣಿಯಲ್ಲಿ ನಿಂತ ಇವರು, ಬ್ರಿಟಿಷರು ಯುದ್ಧ ಮಾಡುವ ಸಂದರ್ಭದಲ್ಲಿ ಅಹಿಂಸಾ ಸತ್ಯಾಗ್ರಹವನ್ನು ಮಾಡಿ ಬ್ರಿಟಿಷರನ್ನು ಸೋಲಿಸುವ ಮೂಲಕ ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಪೂರ್ತಿಯಾಗಿದ್ದರು ಎಂದರು
ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಮಾತನಾಡಿ, ಗಾಂಧಿ ಜಯಂತಿಯನ್ನು ಒಂದು ದಿನಕ್ಕೆ ಸೀಮಿತವಾಗಿ ಉತ್ಸವ ಮಾಡಿ ಆಚರಿಸುವುದಕ್ಕಿಂತ ಅವರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದರಂತೆ ನಡೆಯುವುದು ಮುಖ್ಯ. ಇದರಿಂದ ಆ ಆಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದು ಹೇಳಿದರು.
ಭಾರತ್ ಸ್ಕೌಟ್ಸ್ ಮತುತಿ ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಮಹಾತ್ಮಾ ಗಾಂಧೀಜಿಯವರು ತಮ್ಮ ಜೀವನದಲ್ಲಿ ಸ್ವಚ್ಛತೆಗೆ ಹೆಚ್ಚು ಮಹತ್ವ ನೀಡಿದ್ದರು. ಸ್ವಚ್ಛತಾ ಕಾರ್ಯಗಳು ಕೇವಲ ಅವರ ದಿನಾಚರಣೆಗೆ ಮಾತ್ರ ಸೀಮಿತವಾಗಿರದೇ, ದೈನಂದಿನಗಳಲ್ಲಿಯೂ ತಮ್ಮ ಸುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಅವರ ಶಿಸ್ತು, ಸಂಯಮ, ಸೇವಾ ಪರಿಕಲ್ಪನೆಯನ್ನು ಬಾಲ್ಯದಿಂದಲೇ ರೂಢಿಸಿಕೊಳ್ಳಬೇಕು ಎಂದರು.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಪ್ರಸಾದ್ ರಾವ್ ಎಂ. ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗಾಂಧೀ ಜಯಂತಿ ಅಂಗವಾಗಿ ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಗಾಂಧೀಜಿಯವರ ಸವಿನೆನಪುಗಳ ಭಿತ್ತಿಪತ್ರವನ್ನು ಬಿಡುಗಡೆಗೊಳಿಸಲಾಯಿತು.ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್., ಹೆಚ್ಚುವರಿ ಎಸ್ಪಿ ಎಸ್.ಟಿ. ಸಿದ್ದಲಿಂಗಪ್ಪ, ಲಯನ್ಸ್ ಜಿಲ್ಲಾ ಗವರ್ನರ್ ಮುಹಮ್ಮದ್ ಹನೀಫ್, ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ಪ್ರೊ.ಕೃಷ್ಣಯ್ಯ, ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ಶೇರಿಗಾರ್, ಲಯನ್ಸ್ ಕ್ಲಬ್ ಉಡುಪಿ ಚೇತನ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ ಉಪಸ್ಥಿತರಿದ್ದರು.
ನಗರಸಭೆ ಪೌರಾಯುಕ್ತ ರಾಯಪ್ಪಸ್ವಾಗತಿಸಿದರು. ದಯಾನಂದ ಉಗ್ಗೆಲ್ ಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ವಂದಿಸಿದರು