ಮಣಿಪುರದಲ್ಲಿ 2 ದಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಮಣಿಪುರ: ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮಣಿಪುರದ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

ಮಣಿಪುರದಲ್ಲಿ ಭಾನುವಾರ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ಇಂಫಾಲ್‌ನ ಪಶ್ಚಿಮ ಜಿಲ್ಲೆಗಳಾದ ಕಾಂಚೀಪುರ ಮತ್ತು ತೇರಾ ಮತ್ತು ತೌಬಾಲ್‌ನ ವಿವಿಧ ಭಾಗಗಳಲ್ಲಿ ಹಲವಾರು ಮನೆಗಳಿಗೆ ಹಾನಿಯಾಗಿದೆ.

ಮಳೆ ಸಂಬಂಧಿತ ಅವಘಡಗಳಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ -ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್, ‘ಪ್ರಸ್ತುತ ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಲ್ಲರೂ ಮನೆಯಲ್ಲೇ ಇದ್ದು ಸುರಕ್ಷಿತವಾಗಿರುವಂತೆ ನಾನು ಮನವಿ ಮಾಡುತ್ತೇನೆ. ಜನರ ಆಸ್ತಿಪಾಸ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ’ ಎಂದು ಬರೆದುಕೊಂಡಿದ್ದಾರೆ.

Latest Indian news

Popular Stories