ಕಾರವಾರ : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1 ರಿಂದ 22 ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 14,401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ ಜಿಲ್ಲೆಯಲ್ಲಿ 31 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ದ್ವಿತೀಯ ಪಿಯುಸಿ ಪರೀಕ್ಷೆಯ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ಪರೀಕ್ಷೆಗಳು ಸುಗಮವಾಗಿ ಮತ್ತು ಪಾರದರ್ಶಕವಾಗಿ ನಡೆಯಲು
ಅಗತ್ಯವಿರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ರೆಗ್ಯೂಲರ್ , ಖಾಸಗಿ ಮತ್ತು ಪುನಾರಾವರ್ತಿತ ಸೇರಿದಂತೆ 14,401 ವಿದ್ಯಾರ್ಥಿಗಳು ಹಾಜರಾಗಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ, ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಎಲ್ಲಾ ಕೇಂದ್ರಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು.
ಪರೀಕ್ಷಾ ಕೇಂದ್ರಗಳ ಒಳಗೆ ವಿದ್ಯಾರ್ಥಿಗಳಿಗೆ ಯಾವುದೇ ಮೂಲಭೂತ ಸಮಸ್ಯೆಗಳಾಗದಂತೆ ಸೂಕ್ತ ಬೆಳಕಿನ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಗ್ರಾಮೀಣ ಪ್ರದೇಶದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಸೂಕ್ತ ಸಮಯಕ್ಕೆ ಆಗಮಿಸಲು ಬಸ್‌ಗಳ ಕೊರತೆಯಾಗದಂತೆ ಎಚ್ಚರಿಕೆ ವಹಿಸುವಂತೆ ತಿಳಿಸಿದರು.
ಉಚಿತ ಬಸ್ ಸೌಲಭ್ಯ ನೀಡಿ :ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದ ಬಸ್ ಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ, ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಮತ್ತು ವಾಪಸ್ ಮರಳಲು ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣ ಮಾಡಬಹುದಾಗಿದ್ದು ಜಿಲ್ಲೆಯ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.
ಪ್ರಶ್ನೆ ಪತ್ರಿಕೆ ಪಡೆಯುವಾಗ ವಿಡಿಯೋ ಚಿತ್ರೀಕರಣ:ಪ್ರಶ್ನೆಪತ್ರಿಕೆ ಬಂಡಲ್‌ಗಳನ್ನು ಖಜಾನೆಯಿಂದ ಪಡೆಯುವಾಗ ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಅವುಗಳನ್ನು ತೆರೆಯುವಾಗ ವೀಡಿಯೋ ಚಿತ್ರೀಕರಣ ಮಾಡುವಂತೆ ಹಾಗೂ ಪ್ರಶ್ನೆ ಪತ್ರಿಕೆ ಹಾಗೂ ಉತ್ತರ ಪತ್ರಿಕೆ ಸಾಗಾಟ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸುವಂತೆ ತಿಳಿಸಿದ ಅವರು, ಪರೀಕ್ಷಾ ಕೇಂದ್ರಗಳಿಗೆ ಮತ್ತು ಭದ್ರತಾ ಕೊಠಡಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಪಡೆಯುವಂತೆ ಹಾಗೂ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆಪತ್ರಿಕೆಗಳು ತಲುಪುವುಂತೆ ಅಗತ್ಯವಿರುವ ವಾಹನಗಳ ವ್ಯವಸ್ಥೆ, ಮಾರ್ಗಾಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಾಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸತೀಶ್ ನಾಯ್ಕ್, ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸುವ ಎಲ್ಲಾ ಅಧಿಕಾರಿಗಳು ಉಪಸ್ಥಿತರಿದ್ದರು.
…..