ಉ.ಕ : ನಗರ ಸ್ಥಳೀಯ ಸಂಸ್ಥೆಗಳ ಕ್ರಿಯಾ ಯೋಜನೆಗೆ ಅನುಮೋದನೆ; ಕಾಮಗಾರಿ ಚುರುಕುಗೊಳಿಸಿ: ಜಿಲ್ಲಾಧಿಕಾರಿ ಗಂಗೂಬಾಯಿ

  • ಒಟ್ಟು 24.65 ಕೋಟಿ ಮೊತ್ತದ‌ ಕಾಮಗಾರಿಗಳಿಗೆ ಅನುಮೋದನೆ

ಕಾರವಾರ : ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ 2024-25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿನ ಎಲ್ಲಾ ಕಾಮಗಾರಿಗಳಿಗೆ ಅನುಮೋದನೆ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು, ಈ ಎಲ್ಲಾ ಕಾಮಗಾರಿಗಳನ್ನು ಶೀಘ್ರದಲ್ಲಿ ಆರಂಭಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಕಾಮಗಾರಿಗಳಿಗೆ ಅನುಮೋದನೆ ನೀಡಿದರು.


13ನೇ ಹಣಕಾಸು ಯೋಜನೆಯಡಿ ಜಿಲ್ಲೆಯ ಎಲ್ಲಾ 13 ನಗರಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 16.84 ಕೋಟಿ ರೂ ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ, ಎಸ್.ಎಫ್.ಸಿ ಯೋಜನೆಯ 7.81 ಕೋಟಿ ರೂ ಮೊತ್ತದ ಕಾಮಗಾರಿಗಳ ಕ್ರಿಯಾ ಯೋಜನೆ ಮತ್ತು ಎಂ.ಆರ್.ಎಫ್ ಘಟಕಗಳ ಸ್ಥಾಪನೆಗೆ ಮತ್ತು 7 ಇಂದಿರಾ ಕ್ಯಾಂಟೀನ್ ಗಳಲ್ಲಿ ಅಗತ್ಯವಿರುವ ದುರಸ್ತಿ ಕಾಮಗಾರಿಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿದ ಜಿಲ್ಲಾಧಿಕಾರಿಗಳು, ಈ ಎಲ್ಲಾ ಕಾಮಗಾರಿಗಳಿಗೆ ಕೂಡಲೇ ಟೆಂಡರ್ ಕರೆದು, ನಿಗಧಿತ ಅವಧಿಯೊಳಗೆ ವರ್ಕ್ ಆರ್ಡ್ರ್ ನೀಡಿ, ಮಳೆಗಾಲದ ಮುಗಿದ ಕೂಡಲೇ ಈ ಕಾಮಗಾರಿಗಳನ್ನು ಆರಂಭಿಸಲು, ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸೂಚಿಸಿದರು.

ಜಿಲ್ಲೆಯ ಕಾರವಾರ, ಅಂಕೋಲಾ ಮತ್ತು ಭಟ್ಕಳದಲ್ಲಿನ ಇಂದಿರಾ ಕ್ಯಾಂಟೀನ್ ಗಳಲ್ಲಿ ಸರ್ಕಾರದ ಪರಿಷ್ಕೃತ ಮೆನು ಪ್ರಕಾರ ಸಾರ್ವಜನಿಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿಯ ಭೋಜನ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶನ ನೀಡಿದರು.


ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತೆರಿಗೆ ವಸೂಲಾತಿಗೆ ಆದ್ಯತೆ ನೀಡುವಂತೆ ಹಾಗೂ ನಿಗಧಿತ ಅವಧಿಯಲ್ಲಿ ಶೇ.100 ರಷ್ಟು ತೆರಿಗೆ ವಸೂಲಾತಿಯನ್ನು ಮಾಡುವಂತೆ ಕಟುನಿಟ್ಟಿನ ಸೂಚನೆ ನೀಡಿದ ಅವರು, ತೆರಿಗೆ ಸಂಗ್ರಹದಲ್ಲಿ ಗುರಿ ಸಾಧಿಸದಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್ ಹಾಗೂ ಜಿಲ್ಲೆಯ ಎಲ್ಲಾ ನಗರಸ್ಥಳೀಯ ಸಂಸ್ಥೆಗಳು ಆಯುಕ್ತರು, ಮುಖ್ಯಾಧಿಕಾರಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
…….

Latest Indian news

Popular Stories