ಕಾರವಾರ:ಉತ್ತರ ಕನ್ನಡ ಜಿಲ್ಲೆಯನ್ನು ಮಕ್ಕಳ ಸ್ನೇಹಿ ಜಿಲ್ಲೆಯನ್ನಾಗಿ ರೂಪಿಸಲು ಎಲ್ಲರೂ ಕೈ ಜೋಡಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ.ಟಿ ಹೇಳಿದರು.
ಅವರು ನಗರಸಭೆಯ ಸಭಾಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಬೆಂಗಳೂರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜೆ.ಜೆ. ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಸರ್ವಾಂಗೀಣ ಬೆಳವಣಿಗೆ, ರಕ್ಷಣೆ ಹಾಗೂ ಅವರ ಹಕ್ಕುಗಳ ರಕ್ಷಣೆ ನಮ್ಮ ಆದ್ಯ ಕರ್ತವ್ಯ ಎಂದರು.ಮಕ್ಕಳ ರಕ್ಷಣಾ ನೀತಿ ಅನುಷ್ಠಾನದ ಕಾರ್ಯಸೂಚಿಗಳನ್ನು ಈಗಾಗಲೇ ಹೊರಡಿಸಲಾಗಿದೆ. ಪ್ರತಿ ಶಾಲೆಗಳಲ್ಲೂ ಮಕ್ಕಳ ಸುರಕ್ಷತಾ ಸಮಿತಿ, ಮಕ್ಕಳ ಸಹಾಯ ಗುಂಪು ರಚನೆ ಮಾಡಬೇಕು.
ಮಕ್ಕಳ ದೂರುಗಳನ್ನು ಸಲ್ಲಿಸಲು ದೂರು ಪಟ್ಟಿಗೆಗಳನ್ನು ಕಡ್ಡಾಯವಾಗಿ ಶಾಲೆಗಳಲ್ಲಿ ಇಡಬೇಕು. ಎಲ್ಲಾ ಖಾಸಗಿ ಶಾಲೆಗಳ ಪ್ರಾರಂಭಕ್ಕೂ ಮುನ್ನಾ ಆಡಳಿತ ಮಂಡಳಿಗಳು ಮಕ್ಕಳ ರಕ್ಷಣಾ ಬದ್ದತೆ ಪತ್ರಕ್ಕೆ ಸಹಿ ಹಾಕುವುದು ಕಡ್ಡಾಯವಾಗಿದೆ. ಶಾಲೆಗಳಲ್ಲಿ ಮಕ್ಕಳಿಗೆ ಪೋಕ್ಸೋ ಕಾಯ್ದೆಯ ಕುರಿತು ಜಾಗೃತಿ ಕಾರ್ಯಗಾರ ಆಯೋಜಿಸಬೇಕು ಎಂದರು.
ಪಂಚಾಯತ್ ರಾಜ್ಯ ವ್ಯವಸ್ಥೆಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಕಾನೂನು ಸಮಿತಿ ರಚಿಸಿ,ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮಕ್ಕಳ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕು ಎಂದರು.
ತಮ್ಮ ಸುತ್ತಮುತ್ತಲು ಮಕ್ಕಳ ಮೇಲೆ ಆಗುವ ದೌರ್ಜನ್ಯಗಳು ಕಂಡುಬಂದರೆ ಕೂಡಲೇ ಮಕ್ಕಳ ಸಹಾಯವಾಣಿ 1098 ಗೆ ಸಂಪರ್ಕಿಸಿ ಮಾಹಿತಿ ನೀಡಿದ್ದಲ್ಲಿ ಆ ಮುಗುವಿನ ರಕ್ಷಣೆಗೆ ಕೈ ಕೈ ಜೋಡಿಸಿದಂತಾಗುತ್ತದೆ. ಆ ನಿಟ್ಟಿನಲ್ಲಿ ಮಕ್ಕಳ ರಕ್ಷಣೆಗೆ ಪ್ರತಿಯೊಬ್ಬರು ತಮ್ಮ ಜವಾಬ್ದಾರಿಯುತ ಕರ್ತವ್ಯ ನಿರ್ವಹಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರೇಣುಕಾ ಡಿ. ರಾಯ್ಕರ್ ಮಾತನಾಡಿ ಕಾನೂನು ಸೇವಾ ಪ್ರಾಧಿಕಾರಕ್ಕೆ ಎಲ್ಲಾ ಇಲಾಖೆಗಳ ಮೇಲ್ವಿಚಾರಣೆ ಮಾಡುವ ಅಧಿಕಾರವಿದ್ದು, ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ತಮ್ಮ ಕಾರ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು.
ವಸತಿ ಶಾಲೆಗಳಲ್ಲಿ ವಾಸಿಸುವ ಮಕ್ಕಳಿಗೆ ಗುಣಮಟ್ಟದ ಆಹಾರ ನೀಡಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಮಕ್ಕಳನ್ನು ತಮ್ಮ ಮಕ್ಕಳಂತೆ ಕಾಳಜಿಯಿಂದ ನೋಡಿಕೊಳ್ಳುವುದು ವಸತಿ ಶಾಲೆಗಳ ಮೇಲ್ವಿಚಾರಕರ ಜವಾಬ್ದಾರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ,ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅನ್ನಪೂರ್ಣ ವಸ್ತ್ರದ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸೋನಲ್ ಐಗಳ್, ಮತ್ತಿತರರು ಉಪಸ್ಥಿತರಿದ್ದರು.
……