ಮಾರ್ಚ್ 16 ಅಥವಾ 17 ರಂದು ಜಿಲ್ಲೆಯಲ್ಲಿ ಗ್ಯಾರಂಟಿ ಸಮಾವೇಶ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವು ಮಾರ್ಚ್ 16 ಅಥವಾ 17 ರಂದು ಕಾರವಾರದ ರವೀಂದ್ರನಾಥ ಠಾಗೂರ್ ಕಡಲ ತೀರದಲ್ಲಿ ಆಯೋಜಿಸಲಾಗುತ್ತಿದ್ದು, ಮುಖ್ಯಮಂತ್ರಿಗಳು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಈ ಕುರಿತಂತೆ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಅವರು ಬುಧುವಾರ ವಿಡಿಯೋ ಸಂವಾದದ ಮೂಲಕ ನಡೆದ ಸಭೆಯಲ್ಲಿ ಮಾತನಾಡಿದರು.ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ , ಯುವನಿಧಿ ಯೋಜನೆಗಳ, ಜಿಲ್ಲೆಯ ಫಲಾನುಭವಿಗಳು ಈ ಸಮಾವೇಶಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಸುಮಾರು 25000 ಕ್ಕೂ ಅಧಿಕ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದ್ದು, ಈ ಕುರಿತಂತೆ ಸೂಕ್ತ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ, ವಿದ್ಯುತ್ , ಧ್ವನಿವರ್ಧಕ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ತಿಳಿಸಿದರು.

ಶಿಷ್ಠಾಚಾರದಂತೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸುವಂತೆ ಹಾಗೂ ವೇದಿಕೆ ಸ್ಥಳದಲ್ಲಿ ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ ಗಳನ್ನು ಅಳವಡಿಸುವಂತೆ ಸೂಚನೆ ನೀಡಿದರು.ಕಾರ್ಯಕ್ರಮದಲ್ಲಿ ಯಾವುದೇ ವಿದ್ಯುತ್ ವ್ಯತ್ಯಯವಾಗದಂತೆ ಅಗತ್ಯ ವ್ಯವಸ್ಥೆ ಕೈಗೊಳ್ಳುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಕಾರ್ಯಕ್ರಮದ ಸ್ಥಳದಲ್ಲಿ ಸ್ವಚ್ಛತೆ ಮತ್ತು ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಬಿಂಬಿಸುವ ವಸ್ತುಪ್ರದರ್ಶನವನ್ನು ಏರ್ಪಡಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು,ಸೂಕ್ತ ವೈದ್ಯಕೀಯ ಮತ್ತು ಅಂಬುಲೆನ್ಸ್ ಸೌಲಭ್ಯ ಒದಗಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಈ ಸಮಾವೇಶಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಫಲಾನುಭವಿಗಳು ಬರಲು ಅನುಕೂಲವಾಗುವಂತೆ ಅಗತ್ಯ ಬಸ್ ಗಳ ವ್ಯವಸ್ಥೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಬಸ್ ಗಳನ್ನು ನಿಯೋಜಿಸುವಾಗ ದೈನಂದಿನ ಸಾಮಾನ್ಯ ಸಾರಿಗೆ ವ್ಯವಸ್ಥೆಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದರು.
ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆವತಿಯಿಂದ ಅಗತ್ಯ ಭದ್ರತಾ ವ್ಯವಸ್ಥೆಯನ್ನು ಒದಗಿಸುವಂತೆ ಪೊಲೀಸ್ ಇಲಾಖೆಗೆ ತಿಳಿಸಿದರು.

ಗ್ಯಾರಂಟಿ ಯೋಜನೆಯ ಸಮಾವೇಶದ ಯಶಸ್ವಿಗೆ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮದಲ್ಲಿ ಯಾವುದೇ ಲೋಪಗಳಾಗದಂತೆ ಎಲ್ಲಾ ಸಮಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.
ವಿಡಿಯೋ ಸಂವಾದದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
…….

Latest Indian news

Popular Stories