ಸ್ಥಳೀಯ ಜನರ ಸಹಭಾಗಿತ್ವದಲ್ಲಿ ಸಮುದ್ರ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ; ಜಿಪಂ ಸಿಇಓ ಈಶ್ವರ

ಕಾರವಾರ : ಸ್ಥಳೀಯ ಜನರ ಸಹಭಾಗಿತ್ವದಲ್ಲಿ ಸಮುದ್ರ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಜಿ.ಪಂ. ಉತ್ತರ ಕನ್ನಡ ಇವರ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಮುದ್ರ ತ್ಯಾಜ್ಯ ನಿರ್ವಹಣೆ ಕುರಿತ ಜಿಲ್ಲಾ ಮಟ್ಟದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.

ಉತ್ತರ ಕನ್ನಡ ಜಿಲ್ಲೆಯು ಅತಿ ಉದ್ದದ ಕರಾವಳಿ ತೀರ ಪ್ರದೇಶವನ್ನು ಹೊಂದಿದ್ದು, ಇದರಿಂದ 5 ತಾಲ್ಲೂಕುಗಳ ಉದ್ಯೋಗ, ಆರ್ಥಿಕ ಹಾಗೂ ಸಾಮಾಜಿಕ ಸ್ಥಿತಿಗತಿ ಸಮುದ್ರದ ಮೇಲೆ ಹೆಚ್ಚು ಅವಲಂಬಿತವಾಗಿವೆ. ಹೀಗಾಗಿ ಜಿಲ್ಲಾ ಪಂಚಾಯತ್ ವತಿಯಿಂದ ತ್ಯಾಜ್ಯ ಸಂಗ್ರಹ, ವಿಂಗಡನೆ ಮತ್ತು ನಿರ್ವಹಣೆ ಕುರಿತು ಸಾಕಷ್ಟು ತರಬೇತಿ ಕಾರ್ಯಗಾರಗಳನ್ನು ನಡೆಸಲಾಗುತ್ತಿದೆ.

ಆದರೆ ತರಬೇತಿಯಲ್ಲಿ ಪಡೆದ ಜ್ಞಾನ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದ್ದು, ಜನರಿಗೆ ಈ ಕುರಿತು ಜಾಗೃತಿ ಮೂಡಿಸುವ ಕಾರ್ಯವಾಗುತ್ತಿಲ್ಲ. ಸಮುದ್ರ ತ್ಯಾಜ್ಯ ನಿರ್ವಹಣೆ ಬಗ್ಗೆ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸಮಗ್ರವಾಗಿ ತಿಳಿದುಕೊಳ್ಳದೇ ಇರುವುದರಿಂದ ಸ್ಪಷ್ಟವಾಗಿ ತಿಳಿಯುತ್ತದೆ.

ಹೀಗಾಗಿ ಎಲ್ಲ ಅಧಿಕಾರಿಗಳು ನುರಿತ ತಜ್ಞರಿಂದ ಪಡೆದುಕೊಂಡ ಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕಿದೆ ಎಂದರು.ಈ ಕಾರ್ಯ ಯಶಸ್ವಿಯಾಗಲು ಪ್ರತಿಯೊಂದು ಇಲಾಖೆಯ ಸಹಾಯ, ಸಹಕಾರ ಅಗತ್ಯವಾಗಿದೆ ಎಂದರು.

ಕಾರ್ಯಾಗಾರದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಶಿಕ್ಷಣಾರ್ಥಿಗಳಾಗಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಎಸ್‌ಐಆರ್‌ಡಿಯ ಬೋಧಕ ಪ್ರಕಾಶ್ ಎಸ್.ಎಚ್, ಜಿಲ್ಲಾ ಪಂಚಾಯತ್‌ನ ಆಡಳಿತ ಶಾಖೆಯ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಅಭಿವೃದ್ಧಿ ಶಾಖೆಯ ಉಪ ಕಾರ್ಯದರ್ಶಿ ಎನ್.ಜಿ. ನಾಯಕ, ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್, ಪ್ರಭಾರ ಮುಖ್ಯ ಲೆಕ್ಕಾಧಿಕಾರಿ ಡಾ. ಆನಂದ ಸಾಹಬೀಬ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ಜಿ.ಪಂ. ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
……..

Latest Indian news

Popular Stories