Uttara Kannada

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಾಡಿದರೆ ಕಠಿಣ ಕ್ರಮ: ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್

ಕಾರವಾರ : ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಅನಗತ್ಯ ವಿಳಂಬ,ಅನರ್ಹರಿಗೆ ಸೌಲಭ್ಯಗಳ ಮಂಜೂರಾತಿ, ನಿರ್ಲಕ್ಷ್ಯತನ, ಭ್ರಷ್ಟಾಚಾರ ಕುರಿತು ದೂರುಗಳು ಬಂದಲ್ಲಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಲೋಕಾಯುಕ್ತದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಎಚ್ಚರಿಸಿದರು.

ಅವರು ಶುಕ್ರವಾರ ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ನಡೆದ ಉತ್ತರ ಕನ್ನಡದ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಹಾಗೂ ಸಾರ್ವಜನಿಕ ಸಮಸ್ಯೆಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಯಾವುದೇ ಇಲಾಖೆಯ ವಿರುದ್ಧ ಸಲ್ಲಿಕೆಯಾಗುವ ದೂರುಗಳ ಬಗ್ಗೆ ಪರಿಶೀಲಿಸಲು ಲೋಕಾಯುಕ್ತ ದಲ್ಲಿ ಆಡಳಿತ, ತಾಂತ್ರಿಕ ಸೇರಿದಂತೆ ಪ್ರತ್ಯೇಕ ವಿಭಾಗಗಳಿದ್ದು ಅವುಗಳ ಮೂಲಕ ಸತ್ಯಶೋಧನೆ ನಡೆಸಲಾಗುವುದು. ಸರ್ಕಾರಿ, ಅರೆ ಸರ್ಕಾರಿ, ನಿಗಮ,ಮಂಡಳಿಗಳ ನೌಕರರು ಲೋಕಾಯುಕ್ತ ವ್ಯಾಪ್ತಿಯಲ್ಲಿ ಬರಲಿದ್ದು, ಕರ್ತವ್ಯ ದಲ್ಲಿ ಭ್ರಷ್ಟತೆ, ಸಾರ್ವಜನಿಕ ಹಣದ ದುರುಪಯೋಗ, ಕಾಮಗಾರಿಗಳಲ್ಲಿ ಭ್ರಷ್ಟತೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಸರ್ಕಾರವು ತನ್ನ ಸಿಬ್ಬಂದಿಗೆ ಉತ್ತಮ ವೇತನ, ಸೌಲಭ್ಯಗಳನ್ನು ನೀಡುತ್ತಿದ್ದು ಪ್ರಾಮಾಣಿಕ ವಾಗಿ ಸಾರ್ವಜನಿಕರಿಗೆ ಸೇವೆಗಳನ್ನು ಒದಗಿಸಿ ಎಂದರು.

ಪಂಚಾಯತ್ ರಸ್ತೆಗಳಲ್ಲಿ ಗುಣಮಟ್ಟ ಇರಬೇಕು.ಅನರ್ಹರಿಗೆ ಸೌಲಭ್ಯ ಒದಗಿಸಬೇಡಿ ಎಂದು ಲೋಕಾಯುಕ್ತರು ಸೂಚಿಸಿದರು.
ಕಲುಷಿತ ನೀರು ಸರಬರಾಜು ಬಗ್ಗೆ ದೂರುಗಳು ಬಂದಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸರ್ಕಾರಿ ಆಸ್ಪತ್ರೆಗಳಿಗೆ ಬರುವವರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಬೇಕು. ಜಿಲ್ಲಾ, ತಾಲ್ಲೂಕು ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ವಚ್ಛತೆ ಕಾಪಾಡಬೇಕು, ಫಾರ್ಮಸಿ ಗಳಲ್ಲಿ ವಿತರಿಸುವ ಔಷಧಿ ಗಳ ಬಗ್ಗೆ ದಾಖಲೆ ಇಡಬೇಕು, ಜಿಲ್ಲೆಯ ಅಂಕೋಲ, ಕುಮಟಾ,ಕಾರವಾರ ಆಸ್ಪತ್ರೆಯಲ್ಲಿ ಈ ಬಗ್ಗೆ ಪರಿಶೀಲಿಸಿ ವರದಿ ನೀಡುವಂತೆ ಲೋಕಾಯುಕ್ತ ಎಸ್ಪಿ ಗೆ ನಿರ್ದೇಶನ ನೀಡಿದರು.

ಸಾರ್ವಜನಿಕರನ್ನು ಸತಾಯಿಸಬೇಡಿ:ತಾಲೂಕು ಕಚೇರಿಗಳಲ್ಲಿ ಪೌತಿ ಖಾತೆ, ಈ ಸ್ವತ್ತು, ಖಾತೆ ವರ್ಗಾವಣೆ ಪ್ರಕರಣ ಗಳನ್ನು ಹಾಗೂ ಭೂ ದಾಖಲೆಗಳ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಅಧಿಕಾರಿಗಳನ್ನು ಲೋಕಾಯುಕ್ತದ ವತಿಯಿಂದ ಅಭಿನಂದಿಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ, ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕುಮಾರ ಕಾಂದು , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಲೋಕಾಯುಕ್ತ ಎಸ್ ಪಿ ಕುಮಾರ ಚಂದ್ರ, ಅಪರ ಜಿಲ್ಲಾಧಿಕಾರಿ, ಪ್ರಕಾಶ್ ರಾಜಪೂತ್ ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
…….

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button