ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಪಾರದರ್ಶಕತೆ ಇರಲಿ :ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ : ಜಿಲ್ಲೆಯಲ್ಲಿ ಜೂನ್ 30 ರಂದು ನಡೆಯುವ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಯು ಅತ್ಯಂತ ಪಾರದರ್ಶಕವಾಗಿ ನಡೆಯಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯ ಒಟ್ಟು 7 ಪರೀಕ್ಷಾ ಕೇಂದ್ರಗಳಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆಯು ನಡೆಯಲಿದ್ದು, ಇದಕ್ಕಾಗಿ ಪತ್ರಿಕೆ-1ಕ್ಕೆ 984 ಮಂದಿ ಹಾಗೂ ಪತ್ರಿಕೆ-2 ಕ್ಕೆ 1658 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಪರೀಕ್ಷಾ ಅವ್ಯವಹಾರಗಳು ನಡೆಯದಂತೆ ಎಚ್ಚರವಹಿಸಬೇಕು ಹಾಗೂ ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟವಿ ಅಳವಡಿಸುವ ಮೂಲಕ ಪರೀಕ್ಷಾ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಿ, ಪರೀಕ್ಷಾಗೋಪ್ಯತೆ ಕಾಪಾಡಬೇಕು ಎಂದರು.

ಸೂಕ್ತ ಪೊಲೀಸ್ ಭದ್ರತೆಯಲ್ಲಿ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು, ಉತ್ತರ ಪತ್ರಿಕೆಗಳನ್ನು ನಿಗಧಿತ ಸ್ಥಳಕ್ಕೆ ತಲುಪಿಸಲು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಭದ್ರತೆಯನ್ನು ಒದಗಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಪ್ರಶ್ನೆ ಪತ್ರಿಕೆ ವಿತರಣೆಗೆ ಸೂಚಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರಶ್ನೆ ಪತ್ರಿಕೆ ಸಾಗಾಟಕ್ಕೆ ಮಾರ್ಗಾಧಿಕಾರಿಗಳ ನೇಮಕ, ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನಿಯೋಜನೆ ಮತ್ತು ಜಿಲ್ಲಾ ಜಾಗೃತ ದಳ ಹಾಗೂ ಸ್ಥಾನಿಕ ಜಾಗೃತ ದಳಗಳನ್ನು ರಚಿಸುವಂತೆ ತಿಳಿಸಿದರು.
ಪರೀಕ್ಷೆ ನಡೆಯುವ ದಿನದಂದು ವಿದ್ಯುತ್ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಕೆಯಾಗುವಂತೆ ಹೆಸ್ಕಾಂ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಅಕ್ರಮದಲ್ಲಿ ತೊಡಗುವವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ತಮ್ಮ ಉತ್ತಮ ಭವಿಷ್ಯಕ್ಕಾಗಿ ಕಷ್ಟ ಪಟ್ಟು ಓದಿದ ಅಭ್ಯರ್ಥಿಗಳಿಗೆ ಪರೀಕ್ಷಾ ಅಕ್ರಮಗಳಿಂದ ತೊಂದರೆಗಳಾಗದಂತೆ, ಅತ್ಯಂತ ಪಾರದರ್ಶಕವಾಗಿ ಪರೀಕ್ಷೆಯನ್ನು ನಡೆಸುವ ನಿಟ್ಟಿನಲ್ಲಿ, ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಡಿಡಿಪಿಐ ಲತಾ ಹಾಗೂ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
………

Latest Indian news

Popular Stories