ಕಾರವಾರ : ಮಹಾತ್ಮ ಗಾಂಧೀಜಿಯವರು ಜೀವಿಸಿದ ಸರಳ ಮತ್ತು ಶಾಂತಿಯುತ ಮತ್ತು ಅಹಿಂಸಾ ಜೀವನವನ್ನು ಪ್ರತಿಯೊಬ್ಬರೂ ಅನುಸರಿಸುವಂತಾಗಬೇಕು. ಮಹಾತ್ಮ ಗಾಂಧೀಜಿ ಅವರು ನಡೆದು ಬಂದ ಹಾದಿ ಎಲ್ಲರಿಗೂ ಪ್ರೇರಣೆಯಾಗಬೇಕು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹೇಳಿದರು.
ಅವರು ಮಂಗಳವಾರ ನಗರಸಭೆಯ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ನಗರಸಭೆ ಕಾರವಾರ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಹಾಗೂ ಮಾಜಿ ಪ್ರಧಾನ ಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 120ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮಹಾತ್ಮ ಗಾಂಧೀಜಿ ಅವರ ಜೀವನ ಕುರಿತು ಎಷ್ಟು ಓದಿದರೂ, ಅವರು ಪ್ರತಿಪಾದಿಸಿದ ಜೀವನ ಮೌಲ್ಯಗಳು, ಸತ್ಯ, ಅಹಿಂಸೆ ಹಾಗೂ ಆತ್ಮಬಲದ ಕುರಿತು ಪ್ರತಿಯೊಬ್ಬರೂ ತಿಳಿಯಬೇಕಿರುವುದು ಬಹಳಷ್ಟು ಇದೆ.
ಸತ್ಯ, ಅಹಿಂಸೆ ಮತ್ತು ಶಾಂತಿ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಟ್ಟ ಅವರು, ಸತ್ಯ ಶೋಧನೆಯಿಂದ ಮಾತ್ರ ಗುರಿ ತಲುಪಲು ಸಾಧ್ಯ ಎಂಬುದನ್ನು ಸಾರಿ ಹೇಳಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಗಣಪತಿ ಉಳ್ವೇಕರ್, ಸಿಇಒ ಈಶ್ವರ್, ಎಸ್ಪಿ ನಾರಾಯಣ, ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್, ನಗರಸಭೆ ಅಧ್ಯಕ್ಷ ರವಿರಾಜ, ಉಪಾಧ್ಯಕ್ಷೆ ಪ್ರೀತಿ ಜೋಶಿ, ಡಿಯುಡಿಸಿ ಸ್ಟೆಲ್ಲಾ ವರ್ಗಿಸ್, ಪೌರಾಯುಕ್ತ ಜಗದೀಶ ಹುಲಗೆಜ್ಜಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶಿವಕುಮಾರ್, ನಗರಸಭೆಯ ಸದಸ್ಯರು, ಮತ್ತಿತರರು ಇದ್ದರು.