ಸರ್ಕಾರಿ ನೌಕರರು ಯಾವುದೇ ರಾಜಕೀಯ ವ್ಯಕ್ತಿ ಅಥವಾ ಪಕ್ಷದ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುವುದು,ಬೆಂಬಲಿಸುವುದು, ಕಮೆಂಟ್ ಮಾಡುವುದು, ಮತ್ತೊಬ್ಬರಿಗೆ ಕಳುಹಿಸುವುದು ನೀತಿ ಸಂಹಿತೆಯ ಉಲ್ಲಂಘನೆ ವ್ಯಾಪ್ತಿಗೆ ಬರಲಿದೆ.
ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಕೂಡಲೇ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆಯನ್ನು ಅನುಷ್ಠಾನಗೊಳಿಸುವಂತೆ ,ಮಾದರಿ ನೀತಿ ಸಂಹಿತೆ ಜಾರಿಗೊಳಿಸಲು ನಿಯೋಜಿಸಿರುವ ಅಧಿಕಾರಿಗಳಿಗೆ ನೀತಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಹೊರಡಿಸುವ ಮಾದರಿ ನೀತಿ ಸಂಹಿತೆಯನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಯಾವುದೇ ಸಂದರ್ಭದಲ್ಲೂ ಜಿಲ್ಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬಾರದು. ನೀತಿ ಸಂಹಿತೆ ವ್ಯಾಪ್ತಿಗೆ ಒಳಪಡುವ ವಿಷಯಗಳ ಕುರಿತಂತೆ ರೂಪಿಸಿರುವ ಮಾರ್ಗಸೂಚಿಗಳನ್ನು ಸರಿಯಾಗಿ ಅರ್ಥೈಸಿಕೊಂಡು ಅದರಂತೆ ಕಾರ್ಯ ನಿರ್ವಹಿಸಬೇಕು ಎಂದರು.
ನೀತಿ ಸಂಹಿತೆ ಜಾರಿಗೊಳಿಸುವ ಅವಧಿಯಲ್ಲಿ ರಾಜಕಿಯ ಮುಖಂಡರುಗಳು, ರಾಜಕೀಯ ಪಕ್ಷಗಳು , ಸಚಿವರುಗಳಿಗೆ ನಿಗಧಿಪಡಿಸಿರುವ ಕಾರ್ಯ ವ್ಯಾಪ್ತಿಯನ್ನು ಅಧಿಕಾರಿಗಳು ತಿಳಿದು ಅದರಂತೆ ಕಾರ್ಯನಿರ್ವಹಿಸಬೇಕು. ಯಾವುದೇ ರಾಜಕೀಯ ವ್ಯಕ್ತಿ ಅಥವಾ ಪಕ್ಷಗಳಿಗ ಸರಕಾರಿ ನೌಕರರು ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಬೆಂಬಲ ನೀಡುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಲಿದ್ದು ಈ ಕುರಿತಂತೆ ಸಂಬಂದ ಪಟ್ಟ ನೌಕರರ ವಿರುದ್ದ ಪ್ರಜಾ ಪ್ರತಿನಿಧಿ ಕಾಯ್ದೆಯನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ತಮಗೆ ವಹಿಸಲಾಗುವ ಚುನಾವಣಾ ಕರ್ತವ್ಯವನ್ನು ನಿಷ್ಪಕ್ಷಪಾತವಾಗಿ ನಿರ್ವಹಿಸಬೇಕು.ಸರ್ಕಾರಿ ನೌಕರರು ಯಾವುದೇ ರಾಜಕೀಯ ವ್ಯಕ್ತಿ ಅಥವಾ ಪಕ್ಷದ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕುವುದು,ಬೆಂಬಲಿಸುವುದು, ಕಮೆಂಟ್ ಮಾಡುವುದು, ಮತ್ತೊಬ್ಬರಿಗೆ ಕಳುಹಿಸುವುದು ನೀತಿ ಸಂಹಿತೆಯ ಉಲ್ಲಂಘನೆ ವ್ಯಾಪ್ತಿಗೆ ಬರಲಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಎಸ್ಪಿ ಜಯಕುಮಾರ್ ಹಾಗೂ ಮಾದರಿ ನೀತಿ ಸಂಹಿಂತೆ ಅನುಷ್ಠಾನಕ್ಕೆ ನಿಯೋಜಿಸಿರುವ ಅಧಿಕಾರಿಗಳು ಉಪಸ್ಥಿತರಿದ್ದರು.
………