ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜಿಲ್ಲೆ ಗಣನೀಯ ಸಾಧನೆ; ಜಿಲ್ಲಾಧಿಕಾರಿ ಅಭಿನಂದನೆ

ಕಾರವಾರ :ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ಜಿಲ್ಲೆಯು ರಾಜ್ಯಮಟ್ಟದಲ್ಲಿ 5 ನೇ ಸ್ಥಾನ ಪಡೆದು ಗಣನೀಯ ಸಾಧನೆ ತೋರಿದ್ದು, ಇದಕ್ಕಾಗಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕ ವೃಂದ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಶಿರಸಿ ಶೈಕ್ಷಣಿಕ ಜಿಲ್ಲೆಯು ರಾಜ್ಯದಲ್ಲಿ 8 ನೇ ಸ್ಥಾನ ಪಡೆದಿದ್ದು, ಶೇ.84.64 ಫಲಿತಾಂಶ ಬಂದಿದೆ. ಇದರಲ್ಲಿ ಶಿರಸಿಯ 3 ಮಂದಿ ವಿದ್ಯಾರ್ಥಿಗಳು 625 ಕ್ಕೆ 624 ಪಡೆದು ರಾಜ್ಯಕ್ಕೆ ದ್ವಿತೀಯ ಮತ್ತು ಒಬ್ಬ ವಿದ್ಯಾರ್ಥಿ 623 ಅಂಕ ಗಳಿಸಿ ರಾಜ್ಯಕ್ಕೆ ತೃತೀಯ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿರುವುದು ಇಡೀ ಜಿಲ್ಲೆಗೆ ಹೆಮ್ಮೆ ಪಡುವ ವಿಷಯವಾಗಿದೆ ಎಂದಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿಯ ಫಲಿತಾಂಶ ವೃದ್ಧಿಗಾಗಿ ಶಿಕ್ಷಣ ಇಲಾಖೆ ವತಿಯಿಂದ ಹಲವು ಶೈಕ್ಷಣಿಕ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಎಲ್ಲಾ ಶಾಲೆಗಳ ಮುಖ್ಯ ಗುರುಗಳು ಮತ್ತು ಶಿಕ್ಷಕರೊಂದಿಗೆ ನಿರಂತರ ಸಭೆಗಳನ್ನು ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದ್ದರು. ಡಿಸೆಂಬರ್ ವೇಳೆಗೆ ಎಲ್ಲಾ ವಿಷಯವಾರು ಭೋದನೆಯನ್ನು ಮುಕ್ತಾಯಗೊಳಿಸಿ, ಮಾರ್ಚ್ ವರೆಗೆ ಪುರ್ನಮನನ ಕಾರ್ಯಕ್ರಮ ನಡೆಸಲಾಯಿತು.

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಭೆಗಳನ್ನು ಆಯೋಜಿಸಿ, ಅಗತ್ಯ ಸೂಚನೆ ಮಾರ್ಗದರ್ಶನಗಳನ್ನು ನೀಡಿದ್ದು, ಅವುಗಳ ಅನುಸರಣೆ ಜೊತೆಗೆ ಜಿಲ್ಲೆಯ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲಾ ಶಾಸಕರಗಳು ನಿರ್ದೇಶನಗಳ ಪಾಲನೆ ಹಾಗೂ ಸಂಘಟಿತ ಪ್ರಯತ್ನದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ.

ಒಂದು ತಿಂಗಳ ವೇತನದ ಮೊತ್ತವನ್ನು ಬಹುಮಾನ ನೀಡುವ ಘೋಷಣೆ ಮಾಡಿದ್ದ ಜಿಲ್ಲಾಧಿಕಾರಿ :

ಅದರಲ್ಲೂ ಪ್ರಮುಖವಾಗಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಗರಿಷ್ಠ ಫಲಿತಾಂಶ ಪಡೆಯುವ ತಾಲೂಕುಗಳಿಗೆ ತಮ್ಮ ಒಂದು ತಿಂಗಳ ವೇತನದ ಮೊತ್ತವನ್ನು ಬಹುಮಾನವನ್ನಾಗಿ ನೀಡುವ ಘೋಷಣೆಯನ್ನು ಮಾಡಿದ್ದು, ಇದು ತಾಲೂಕುಗಳ ಮಟ್ಟದಲ್ಲಿ ಅಧಿಕಾರಿಗಳು ಇನ್ನಷ್ಟು ಉತ್ಸಾಹದಿಂದ ಫಲಿತಾಂಶ ವೃದ್ಧಿಗೆ ಆರೋಗ್ಯಕರ ಪೈಪೋಟಿಯಿಂದ ಕರ್ತವ್ಯ ನಿರ್ವಹಿಸಲು ಪ್ರೇರಣೆಯಾಯಿತು ಎನ್ನುತ್ತಾರೆ ಶಿರಸಿ ಶೈಕ್ಷಣಿಕ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿದೇಶಕ ಬಸವರಾಜ್.
ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆಗಳು ಹಾಗೂ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ದೃತಿಗೆಡುವ ಅವಶ್ಯಕತೆಯಿಲ್ಲ. ನಿಮಗೆ ಉತ್ತೀಣರಾಗಲು ಮತ್ತೊಂದು ಅವಕಾಶವಿದ್ದು, ಜೂನ್ 7 ರಿಂದ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-2 ರಲ್ಲಿ ತಮಗೆ ಪುನಃ ಪರೀಕ್ಷೆ ಬರೆಯಲು ಅವಕಾಶವಿದೆ. ಜಿಲ್ಲೆಯ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು ಮತ್ತು ಶಿಕ್ಷಕರು ಪ್ರಸ್ತುತ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಸಾಂತ್ವನ ಹೇಳಿ, ಪರೀಕ್ಷೆ-2 ಗೆ ಅವರಿಗೆ ಅಗತ್ಯ ತರಬೇತಿ ನೀಡುವುದರ ಮೂಲಕ ಅವರೂ ಕೂಡಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಸಲಹೆ ನೀಡಿದ್ದಾರೆ.
ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಶೇ.100 ಸಾಧನೆ ಮಾಡಲು ತಮ್ಮ ಶಕ್ತಿ ಮೀರಿ ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Latest Indian news

Popular Stories