ಉ.ಕ| ಜಿಲ್ಲೆಯಲ್ಲಿ ಉಪ ಲೋಕಾಯುಕ್ತರಿಂದ ದೂರು ಅರ್ಜಿಗಳ ಸ್ವೀಕಾರ ಹಾಗೂ ವಿಚಾರಣೆ

ಕಾರವಾರ : ರಾಜ್ಯದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಮಾರ್ಚ್ 2 ರಿಂದ 4 ರ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ‌ .

ಸದರಿ ಪ್ರವಾಸದ ಅವಧಿಯಲ್ಲಿ ಮಾರ್ಚ್ 2 ರಂದು ಬೆಳಿಗ್ಗೆ 10 ರಿಂದ 1.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 5 ರವರೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು ಹಮ್ಮಿಕೊಂಡಿರುವುದರಿಂದ, ಜಿಲ್ಲೆಯಲ್ಲಿ ಯಾವುದೇ ಸಾರ್ವಜನಿಕರಿಗೆ ಸರ್ಕಾರಿ ಅಧಿಕಾರಿ, ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದಲ್ಲಿ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುತ್ತಿದ್ದಲ್ಲಿ ನ್ಯಾಯಾಧೀಶರಿಗೆ ದೂರು ನೀಡಬಹುದು.

ಅಧಿಕಾರಿ ಇನ್ಯಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದರೆ, ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಗೌರವಾನ್ವಿತರ ಮುಂದೆ ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ. ಸದರಿ ಅಹವಾಲುಗಳನ್ನು ಗೌರವಾನ್ವಿತರು ಸ್ವೀಕರಿಸಲು, ಬಗೆಹರಿಸಲು ಮೇಲ್ಕಂಡಂತೆ ಸಮಯ ನಿಗದಿಪಡಿಸಿರುತ್ತಾರೆ.

ಮಾರ್ಚ್ 4 ರಂದು ಬೆಳಿಗ್ಗೆ 10 ರಿಂದ 1.30 ರವರೆಗೆ ಮತ್ತು ಮಧ್ಯಾಹ್ನ 2.30 ರಿಂದ 5 ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣ, ಉತ್ತರ ಕನ್ನಡ ಜಿಲ್ಲೆ , ಇಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ , ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳಲ್ಲಿ , ತನಿಖೆ ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿದ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಸುತ್ತಾರೆ. ಆದ್ದರಿಂದ, ದೂರುದಾರರು ನಿಗದಿತ ಸಮಯದಲ್ಲಿ ಹಾಜರಿದ್ದು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
…….

Latest Indian news

Popular Stories