ಬಾಲ ಕಾರ್ಮಿಕ ಮುಕ್ತ ಜಿಲ್ಲೆಯಾಗಲಿ ಉತ್ತರ ಕನ್ನಡ : ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ದತಿಯನ್ನು ಸಂಪೂರ್ಣ ನಿರ್ಮೂಲನೆ ಮಾಡಿ, ಜಿಲ್ಲೆಯನ್ನು ಬಾಲ ಕಾರ್ಮಿಕ ಪದ್ದತಿ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಬಾಲ ಕಾರ್ಮಿಕ ಯೋಜನಾ ಸೊಸೈಟಿಯ, ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 14 ವರ್ಷದೊಳಗಿನ ಮಕ್ಕಳು ಅಪಾಯಕಾರಿ ಉದ್ದಿಮೆ, ಕೈಗಾರಿಕೆಗಳಲ್ಲಿ ಹಾಗೂ ಅಪಾಯಕಾರಿ ಅಲ್ಲದ ಚಟುವಟಿಕೆಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಲ್ಲಿ ಅಂತಹ ಮಕ್ಕಳನ್ನು ಅಲ್ಲಿಂದ ಮುಕ್ತಗೊಳಿಸಿ, ಅವರಿಗೆ ವಿದ್ಯಾಭ್ಯಾಸ ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸಮಾಜದ ಮುಖ್ಯವಾಹಿನಿಗೆ ತರಲು ಕಾರ್ಮಿಕ ಇಲಾಖೆ, ಪೊಲೀಸ್, ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳು ಇನ್ನಷ್ಟು ಸಂಘಟಿತವಾಗಿ, ಪರಿಣಾಮಕಾರಿಯಗಿ ಕಾರ್ಯನಿರ್ವಹಿಸಬೇಕು ಎಂದರು.

ಬಾಲ ಕಾರ್ಮಿಕ ಪದ್ದತಿಯ ದುಷ್ಪರಿಣಾಮಗಳ ಬಗ್ಗೆ ಜಿಲ್ಲೆಯಾದ್ಯಂತ ವ್ಯಾಪಕ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮತ್ತು ಬಾಲ ಕಾರ್ಮಿಕರನ್ನು ಬಳಸಿಕೊಳ್ಳುವವರಿಗ ನೀಡುವ ಶಿಕ್ಷೆಯ ಪ್ರಮಾಣ ಮತ್ತು ದಂಡದ ಕುರಿತಂತೆ ಎಲ್ಲಾ ಕೈಗಾರಿಕೆಗಳು, ಹೋಟೆಲ್‌ಗಳ ಮಾಲೀಕರಿಗೆ ಮತ್ತು ಉದ್ದಿಮೆದಾರರಿಗೆ ಜಾಗೃತಿ ಮೂಡಿಸುವುದರ ಜೊತೆಗೆ, ಈ ಬಗ್ಗೆ ಸಾರ್ವಜನಿಕ ಸ್ಥಳಗಳಲ್ಲಿ ಸೂಕ್ತ ಪ್ರಚಾರ ಫಲಕಗಳನ್ನು ಅಳವಡಿಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಕಾಯ್ದೆಯಡಿ ಜಿಲ್ಲೆಯಲ್ಲಿ ಈಗಾಗಲೇ ನೇಮಿಸಲಾಗಿರುವ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಅನಿರೀಕ್ಷಿತ ತಪಾಸಣೆಗಳನ್ನು ನಡೆಸಿ, ಬಾಲ ಕಾರ್ಮಿಕರನ್ನು ಪತ್ತೆ ಹಚ್ಚುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಬಸ್ ಮತ್ತು ರೈಲ್ವೆ ನಿಲ್ದಾಣದಲ್ಲಿ ಕಂಡು ಬರುವ ಮಕ್ಕಳಿಗೆ ಸೂಕ್ತ ಪುರ್ನವಸತಿ ಸೌಲಭ್ಯಗಳನ್ನು ಒದಗಿಸುವಂತೆ ತಿಳಿಸಿದರು.

ಬಾಲ ಕಾರ್ಮಿಕರು ಪತ್ತೆಯಾದಲ್ಲಿ ಸಂಬಂಧಪಟ್ಟ ಮಾಲೀಕರ ವಿರುದ್ದ ಕಾನೂನಿನನ್ವಯ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಪತ್ತೆಯಾದ ಬಾಲ ಕಾರ್ಮಿಕರಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ದೊರೆಯುವಂತೆ, ವಸತಿ ಶಾಲೆಗಳಿಗೆ ಸೇರ್ಪಡೆ ಮಾಡಲು ಕ್ರಮ ಕೈಗೊಳ್ಳಿ ಎಂದರು.

ಪ್ರಸ್ತುತ ಶಾಲಾರಂಭವಾಗಲಿದ್ದು, ಈ ಸಮಯದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಅವರನ್ನು ಶಾಲೆಗೆ ಸೇರ್ಪಡೆ ಮಾಡಬೇಕು ಇಲ್ಲವಾದಲ್ಲಿ ಅವರು ಬಾಲ ಕಾರ್ಮಿಕರಾಗುವ ಸಾಧ್ಯತೆ ಅಧಿಕವಾಗಿದ್ದು ಈ ಕುರಿತಂತೆ ಕಾರ್ಮಿಕ ಇಲಾಖೆಯ ನಿರೀಕ್ಷಕರುಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಎಪ್ರಿಲ್ 23 ರಿಂದ ಮಾರ್ಚ್ 24 ರ ವರೆಗೆ 2631 ತಪಾಸಣೆಗಳನ್ನು ನಡೆಸಿದ್ದು, ಯಾವುದೇ ಬಾಲ ಕಾರ್ಮಿಕರು ಪತ್ತೆಯಾಗಿರುವುದಿಲ್ಲ ಆದರೆ 9 ಮಂದಿ ಕಿಶೋರ ಕಾರ್ಮಿಕರು ಪತ್ತೆಯಾಗಿದ್ದು, ಅಂತಹ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಉಪ ವಿಭಾಗಾಧಿಕಾರಿ ಕನಿಷ್ಕ, ಸಹಾಯಕ ಪೊಲೀಸ್ ಅಧೀಕ್ಷಕ ಜಯಕುಮಾರ್, ಕಾರ್ಮಿಕ ಇಲಾಖೆ ಅಧಿಕಾರಿ ವೀಣಾ ಮಾಸ್ತಿ ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

…..

Latest Indian news

Popular Stories