ವಿಜಯಪುರ: ಬೇಸಿಗೆಯ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರಿಗೆ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕುಡಿಯುವ ನೀರಿನ ನಿರ್ವಹಣೆ ಹಾಗೂ ನೀರಿನ ಸ್ಥಿತಿಗತಿ ಕುರಿತು ಸಭೆ ನಡೆಸಿದ ಅವರು, ಈಗಿನಿಂದಲೇ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾದ ಗ್ರಾಮಗಳನ್ನು ಗುರುತಿಸಿಟ್ಟುಕೊಳ್ಳಬೇಕು. ಸಮಸ್ಯಾತ್ಮಕ ಪ್ರದೇಶಗಳಲ್ಲಿ ಪಂಚಾಯತಿ ವತಿಯಿಂದ ನೀರು ಪೂರೈಸಲು ಕ್ರಮ ವಹಿಸಬೇಕು. ಅವಶ್ಯವಿದಲ್ಲಿ ಮಾತ್ರ ಖಾಸಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಕ್ರಮ ವಹಿಸಬೇಕು. ಈಗಾಗಲೇ ಜಿಲ್ಲೆಯಲ್ಲಿ 98 ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದ್ದು, ಅಗತ್ಯವಿದ್ದಲ್ಲಿ ಹೆಚ್ಚುವರಿಯಾಗಿ ನೀರು ಇಳುವರಿಯಿರುವ ಖಾಸಗಿ ಬೊರವೆಲ್ಗಳನ್ನು ಮುಂಜಾಗ್ರತಾ ಕ್ರಮವಾಗಿ ಗುರುತಿಸಿಟ್ಟುಕೊಂಡು ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಮ ವಹಿಸಬೇಕು. ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ತೊಂದರೆಯಾಗದಂತೆ ನೋಡಿಕೊಳ್ಳಲು ಅಗತ್ಯ ಮೇವನ್ನು ದಾಸ್ತಾನಿಟ್ಟುಕೊಳ್ಳಬೇಕು ಕಾಲಕಾಲಕ್ಕೆ ಟಾಸ್ಕಪೋರ್ಸ್ ಸಮಿತಿ ಸಭೆ ನಡೆಸಬೇಕು. ಬೇಸಿಗೆಯ ಸಂದರ್ಭದಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಗ್ರಾಮ ಮಟ್ಟದ ಹಾಗೂ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಸಮಿತಿ ಸಭೆ ನಡೆಸಿ, ಸೂಕ್ತ ಕ್ರೀಯಾಯೋಜನೆ ಸಿದ್ದಪಡಿಸಿ ಸಲ್ಲಿಸಬೇಕು. ಗ್ರಾಮ ಪಂಚಾಯತ್, ಪುರಸಭೆ, ಪಟ್ಟಣ ಪಂಚಾಯತ್, ಸ್ಥಳೀಯ ನಗರ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಎಲ್ಲ ಮಾಹಿತಿಯನ್ನು ಕ್ರೋಡಿಕರಿಸಿಕೊಂಡು ಪೂರ್ವ ಸನ್ನದ್ಧವಾಗಿರುವಂತೆ ಅವರು ಅಧಿಕಾರಿಗಳಿಗೆ ತಿಳಿಸಿದರು.
ವಿಜಯಪುರ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಭೂತನಾಳ ಕೆರೆ ಪಕ್ಕದಲ್ಲಿರುವ ಮುಖ್ಯ ಕಾಲುವೆಯಿಂದ ಭೂತನಾಳ ಕೆರೆಗೆ ನೀರು ಸಂಗ್ರಹಿಸಲು ತಾತ್ಕಾಲಿಕ ತೆರೆದ ಕಾಲುವೆ ಮೂಲಕ ಕೆರೆಗೆ ನೀರು ಹರಿಸಿ ಭರ್ತಿಗೆ ಕ್ರಮ ವಹಿಸಿ ನಗರದಾದ್ಯಂತೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕೃಷ್ಣಾ ಭಾಗ್ಯ ಜಲನಿಗಮದ ಮುಖ್ಯ ಅಭಿಯಂತರರಾದ ಎಚ್.ಎನ್.ಶ್ರೀನಿವಾಸ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಪಶೂ ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಅಶೋಕ ಘೋಣಸಗಿ, ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಅಭಿಯಂತರ ಕುಂಬಾರ, ನಗರ ನೀರು ಸರಬರಾಜು ಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.