ವಿಜಯಪುರ: ತಂಬಾಕು ಸೇವನೆಯಿಂದ ಆಗುವ ದುಷ್ಪರಿಣಾಮದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ 2023-24ನೇ ಸಾಲಿನ ಜಿಲ್ಲಾ ಮಟ್ಟದ ತ್ರೈಮಾಸಿಕ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂಬಾಕು ಸೇವನೆಯಿಂದ ಹಲವಾರು ಗಂಭೀರ ಕಾಯಿಲೆಗಳಿಗೆ ತುತ್ತಾಗಿ, ಆರೋಗ್ಯದ ವ್ಯಕ್ತಿರಿಕ್ತ ಪರಿಣಾಮಗಳು ಉಂಟಾಗಲಿರುವ ಕುರಿತು ವ್ಯಾಪಕವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾರ್ವಜನಿಕರಲ್ಲಿ ತಿಳುವಳಿಕೆ ಮೂಡಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ, ಆಹಾರ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಗಳು ಸಮನ್ವಯತೆಯಿಂದ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತಂಬಾಕು ಮಾರಾಟ ನಿಷೇಧ ಕೊಟ್ಪಾ ಕಾಯ್ದೆಯ ಸೆಕ್ಷನ್ 4 ಮತ್ತು 6(ಎ)ರನ್ವಯ ನಾಮಫಲಕಗಳನ್ನು ಕಡ್ಡಾಯವಾಗಿ ಅಳವಡಿಸಲು ಕ್ರಮ ವಹಿಸಬೇಕು. ನಿಷೇಧಿತ ವಲಯಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಸವೇಕ್ಷಣಾಧಿಕಾರಿ ಡಾ.ಕವಿತಾ ಕೊಟ್ಪಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನದ ಕುರಿತು ಸಭೆಗೆ ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ, ನಗರಾಭಿವೃದ್ದಿ ಇಲಾಖೆ ಯೋಜನಾ ನಿರ್ದೇಶಕ ವಿಜಯಕುಮಾರ ಮೆಕ್ಕಳಕಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.